More

    ದೆಹಲಿ ಹೋರಾಟ ಬೆಂಬಲಿಸಿ ರೈತರ ಪ್ರತಿಭಟನೆ

    ಹಾವೇರಿ: ಕೇಂದ್ರ ಸರ್ಕಾರದ ರೈತ ವಿರೋಧಿ ಕಾಯ್ದೆ ತಿದ್ದುಪಡಿ ಖಂಡಿಸಿ ಹಾಗೂ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ನೂರಾರು ರೈತರು ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ತಡೆದು ಬುಧವಾರ ಬೆಳಗ್ಗೆ ಪ್ರತಿಭಟನೆ ನಡೆಸಿದರು.

    ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲೇ ಕುಳಿತು ವಾಹನ ಸಂಚಾರಕ್ಕೆ ತಡೆಯೊಡ್ಡಿದರು. ಕೈಯಲ್ಲಿ ಬಾರಕೋಲು ಹಿಡಿದು, ಚಕ್ಕಡಿ, ಎತ್ತುಗಳನ್ನು ರಸ್ತೆಗೆ ಅಡ್ಡ ನಿಲ್ಲಿಸಿ, 15 ನಿಮಿಷಗಳ ಕಾಲ ರಸ್ತೆ ಸಂಚಾರಕ್ಕೆ ತಡೆಯೊಡ್ಡಿ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರೂ ಒಪ್ಪಲಿಲ್ಲ. ಹೀಗಾಗಿ, 50ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದೊಯ್ದು ನಂತರ ಬಿಡುಗಡೆಗೊಳಿಸಿದರು.

    ಇದಕ್ಕೂ ಮುನ್ನ ರೈತ ಸಂಘದ ಅಧ್ಯಕ್ಷ ಮಂಜುನಾಥ ಹುಚ್ಚಣ್ಣನವರ, ಪ್ರಮುಖರಾದ ಮಾಲತೇಶ ಯಲ್ಲಾಪುರ, ಎಂ.ಎನ್. ನಾಯ್ಕ ಇತರರು ಮಾತನಾಡಿ, ‘ಕೃಷಿ ಸುಧಾರಣೆಗೆಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳ ವಿರುದ್ಧ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಸರ್ಕಾರ ರೈತರ ಮೇಲೆ ಅಶ್ರುವಾಯು, ಜಲಫಿರಂಗಿ ಹಾರಿಸಿ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ. ಆದ್ದರಿಂದ ಈ ಕಾಯ್ದೆಗಳನ್ನು ರದ್ದುಗೊಳಿಸಬೇಕು’ ಎಂದು ಒತ್ತಾಯಿಸಿದರು.

    ರೈತ ವಿರೋಧಿ ನಿಲುವು ತಾಳಿದರೆ ಮುಂದಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ರೈತರು ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

    ರಾಷ್ಟ್ರೀಯ ಹೆದ್ದಾರಿ ತಡೆಯಿಂದ ಎರಡೂ ಕಡೆಗಳಿಂದ ಬಂದ ವಾಹನ ಕಿಲೋಮೀಟರ್​ವರೆಗೆ ನಿಲ್ಲುವಂತಾಯಿತು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ರಸ್ತೆ ಸಂಚಾರ ಸುಗಮಗೊಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts