More

    ಕೆಲಸಕ್ಕೆ ಮಕ್ಕಳನ್ನು ನೇಮಿಸಿಕೊಂಡರೆ ಎಫ್‌ಐಆರ್ ದಾಖಲಿಸಿ; ಡಿಸಿ ಸೂಚನೆ

    ಶಿವಮೊಗ್ಗ: ಹೋಟೆಲ್, ಲಾಡ್ಜ್, ಗ್ಯಾರೇಜ್, ಮನೆಗೆಲಸ, ಇಟ್ಟಿಗೆಬಟ್ಟಿ ಸೇರಿ ಇತರ ಕಡೆ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡವರ ವಿರುದ್ಧ ಪ್ರಕರಣ ದಾಖಲಿಸಿ ಎಫ್‌ಐಆರ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

    ಡಿಸಿ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಕಾರ್ಯಕಾರಿ ಸಮಿತಿ ಹಾಗೂ ಮೇಲ್ವಿಚಾರಣೆ ಮತ್ತು ಜಾಗರೂಕತೆ ಸಮಿತಿ ಸಭೆಯಲ್ಲಿ ಮಾತನಾಡಿ, ಸಾಮಾನ್ಯವಾಗಿ ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್, ಲಾಡ್ಜ್, ಗ್ಯಾರೇಜ್, ಮನೆಗೆಲಸ, ಸ್ವಚ್ಛತಾ ಕೆಲಸಗಳು, ಮಲೆನಾಡಿನ ಗ್ರಾಮೀಣ ಭಾಗದಲ್ಲಿ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದನ್ನು ಕಾಣುತ್ತಿದ್ದು ಅಧಿಕಾರಿಗಳು ಇಂತಹ ಕಡೆ ಹೆಚ್ಚಿನ ಗಮನ ಹರಿಸಿ ದಾಳಿ ಮಾಡಿ ಮಕ್ಕಳನ್ನು ಮುಖ್ಯವಾಹಿನಿಗೆ ಕರೆ ತರಬೇಕು ಎಂದರು.
    ಸಂರಕ್ಷಿಸಲ್ಪಟ್ಟ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ಅವರಿಗೆ ಶಿಕ್ಷಣ ಹಾಗೂ ನಿಯಮಾನುಸಾರ ಇತರ ಸಮರ್ಪಕ ವ್ಯವಸ್ಥೆ ಮಾಡಬೇಕು. ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡ ಮಾಲೀಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ಎಫ್‌ಐಆರ್ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
    ಎಲ್ಲ ತಾಲೂಕುಗಳಲ್ಲಿ ಬಾಲಕಾರ್ಮಿಕರ ಕುರಿತು ತಪಾಸಣೆ ಕೈಗೊಳ್ಳಬೇಕು. ಮಕ್ಕಳನ್ನು ಸಾಮಾನ್ಯವಾಗಿ ಕೆಲಸಕ್ಕೆ ನಿಯೋಜಿಸುವಂತಹ ಸ್ಥಳಗಳನ್ನು ಗುರುತಿಸಿ ದಾಳಿಗಳನ್ನು ಕೈಗೊಂಡು ತಕ್ಷಣ ಪ್ರಕರಣ ದಾಖಲಿಸಬೇಕು. ಹೆಚ್ಚೆಚ್ಚು ಪ್ರಕರಣ ದಾಖಲಿಸಿ, ಎಫ್‌ಐಆರ್ ಮಾಡಿದಂತೆ ಬಾಲಕಾರ್ಮಿಕತೆಯನ್ನು ಕಡಿಮೆ ಮಾಡಬಹುದು. ಆದ್ದರಿಂದ ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದು ಹೇಳಿದರು.
    ಎಎಸ್ಪಿ ಅನಿಲ್ಕುಮಾರ್ ಭೂಮರಡ್ಡಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ರಘುನಾಥ್, ಕಾರ್ಮಿಕ ಇಲಾಖೆ ಅಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts