More

    ಇ-ಆಫೀಸ್‌ನಿಂದಲೇ ಕಡತ ವಿಲೇಯಾಗಲಿ

    ಚಿಕ್ಕಮಗಳೂರು: ಇ-ಆಫೀಸ್ ತಂತ್ರಾಂಶದ ಮೂಲಕ ಕಡತಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯ ಅಧಿಕಾರಿಗಳಿಗೆ ಸೂಚಿಸಿದರು.

    ಜಿಪಂ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು ಇ-ಆಫೀಸ್ ಮೂಲಕವೇ ಪತ್ರ ವ್ಯವಹಾರ ಮಾಡಬೇಕು. ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿಗಳನ್ನು ನಿಗದಿತ ಸಮಯದಲ್ಲಿ ಇ-ಆಫೀಸ್ ಮೂಲಕವೇ ವಿಲೇವಾರಿ ಮಾಡಬೇಕು. ಇ-ಆಫೀಸ್ ಬಳಕೆ ಮಾಡದೆ ಭೌತಿಕ ಕಡತಗಳನ್ನು ತೆರೆಯುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
    ತಾಲೂಕು ಕಚೇರಿಗಳ ಆಧುನೀಕರಣ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಎಲ್ಲ ಹಳೆಯ ಕಡತಗಳ ಸ್ಕಾೃನಿಂಗ್ ಮತ್ತು ಡಿಜಿಟಲೀಕರಣ ಮಾಡಲಾಗುವುದು. ಇಲಾಖೆಯ ಪೋರ್ಟಲ್‌ನಿಂದ ಆ ದಾಖಲೆಗಳನ್ನು ಸಾರ್ವಜನಿಕರು ನೇರವಾಗಿ ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದರು.
    ಸಬ್ ರಿಜಿಸ್ಟ್ರಾರ್ ಕಚೇರಿ ಖಾಸಗಿ ಕಟ್ಟಡದಲ್ಲಿದೆ. 10 ದಿನದೊಳಗೆ ತಾಲೂಕು ಕಚೇರಿಗೆ ವರ್ಗಾಯಿಸಬೇಕು. ಸಬ್ ರಿಜಿಸ್ಟ್ರಾರ್, ತಹಸೀಲ್ದಾರ್ ಹಾಗೂ ಆರ್‌ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಮಿತಿ ಮೀರಿದೆ ಎಂದು ದೂರುಗಳಿವೆ. ಕೂಡಲೇ ಎಲ್ಲ ಇಲಾಖೆಗಳಲ್ಲಿಯೂ ದಲ್ಲಾಳಿಗಳಿಗೆ ಕಡಿವಾಣ ಹಾಕಬೇಕು. ಮುಂದೆ ಇಂತಹ ದೂರುಗಳು ಕೇಳಿಬಂದರೆ ಸಂಬಂಧಿಸಿದವರ ವಿರುದ್ಧ ಕ್ರಮ ಜರುಗಿಸುವುದಾಗಿ ತಿಳಿಸಿದರು.
    ಜಿಲ್ಲೆಯಲ್ಲಿ ಕುಡಿಯುವ ನೀರು ಮತ್ತು ಮೇವಿನ ಕೊರತೆ ಆಗದಂತೆ ಮುಂಜಾಗ್ರತೆ ವಹಿಸಬೇಕು. ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳ ಮೂಲಕ ನೀರು ಪೂರೈಸಬೇಕು. ಫಾರ್ಮ್ 50, 53 ಅರ್ಜಿಗಳನ್ನು ಡಿಜಿಟಲೀಕರಣ ಮಾಡಬೇಕು. ಜಿಲ್ಲೆಯಲ್ಲಿನ ಕೆರೆಗಳ ಸರ್ವೇ ನಡೆಸಿ, ಒತ್ತುವರಿ ತೆರವುಗೊಳಿಸಬೇಕು ಎಂದು ಸೂಚಿಸಿದರು.
    ಡಿಸಿ ಮೀನಾ ನಾಗರಾಜ್, ಜಿಪಂ ಸಿಇಒ ಡಾ. ಬಿ.ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ನಾರಾಯಣ ಕನಕ ರಡ್ಡಿ, ಉಪವಿಭಾಗಾಧಿಕಾರಿಗಳಾದ ದಲ್ಜಿತ್‌ಕುಮಾರ್, ಡಾ. ಕಾಂತರಾಜು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts