ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರದ ಎಲ್ಲಿಯೂ ಅನಧಿಕೃತ ಜಾಹೀರಾತು ಅಳವಡಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಎಲ್ಲ 8 ವಲಯಗಳಲ್ಲಿ ಅನಧಿಕೃತ ಜಾಹೀರಾತುಗಳನ್ನು ಅಳವಡಿಸಿರುವುದನ್ನು ತೆರವುಗೊಳಿಸಿ, ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಈ ವಿಚಾರದಲ್ಲಿ ಯಾವ ಮುಲಾಜಿಗೂ ಒಳಗಾಗದೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯಿಂದ ಹೊರಗುಳಿದ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕು. ಈ ಸಂಬಂಧ ಆಯಾ ವಲಯ ವ್ಯಾಪ್ತಿಯಲ್ಲಿ ಎಷ್ಟು ಸ್ವತ್ತುಗಳು ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದಿವೆ ಎಂಬುದನ್ನು ಗುರುತಿಸಿ ಎಲ್ಲ ಸ್ವತ್ತುಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮುಖ್ಯ ಆಯುಕ್ತರು ಸೂಚನೆ ನೀಡಿದರು.
ಸಭೆಯಲ್ಲಿ ಪಾಲಿಕೆಯ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ. ಕೆ.ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಅರ್ಚನಾ, ವಿನೋತ್ ಪ್ರಿಯಾ, ರಮೇಶ್, ಗಿರೀಶ್, ಕರೀಗೌಡ, ರಮ್ಯಾ ಉಪಸ್ಥಿತರಿದ್ದರು.