

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿಯ ಮಲ್ಕಾಪುರಂನ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಸ್ಥಾವರದಲ್ಲಿ ಮಂಗಳವಾರ ಸಂಜೆ ವೇಳೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.
ಸ್ಥಳಕ್ಕೆ ಭಾರತೀಯ ನೌಕಾಪಡೆಯ ತಜ್ಞರ ತಂಡವೂ ಆಗಮಿಸಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ಸಹಾಯ ಮಾಡಿದೆ. ಬೆಂಕಿಯಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಖಚಿತಪಡಿಸಲಾಗಿದೆ. ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ಸೂಕ್ತ ಸಮಯದಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿ ವಿನಯ್ ಚಂದ್ ಅವರ ನೇತೃತ್ವದಲ್ಲಿ ಬೆಂಕಿ ನಂದಿಸುವ ಕೆಲಸವಾಗಿದೆ.
ಎಚ್‌ಪಿಸಿಎಲ್ ಸ್ಥಾವರದ ಕಚ್ಚಾ ಬಟ್ಟಿ ಇಳಿಸುವಿಕೆಯ ಘಟಕದಲ್ಲಿ (ಸಿಡಿಯು) ಪೈಪ್‌ಲೈನ್‌ನಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆ ತಿಳಿಸಿದೆ. ಅಪಘಾತದ ನಂತರ ಸಿಡಿಯು ಮುಚ್ಚಲಾಗಿದೆ. ಸ್ಥಳೀಯ ಆಡಳಿತವು ಬೆಂಕಿಗೆ ಕಾರಣವೇನು ಮತ್ತು ಯಾವುದೇ ಅಪಘಾತ ಸಂಭವಿಸಿದೆಯೇ ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದೆ. (ಏಜೆನ್ಸೀಸ್)