

ಬೆಂಗಳೂರಿನ ಆರ್ಎಚ್ಪಿ ರಸ್ತೆಯಲ್ಲಿ ಬಾರ್ ವೊಂದರ ಮಾಲೀಕನ ಮೇಲೆ ಗುಂಡಿನ ದಾಳಿ ನಡೆದಿದೆ.
ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ (45)ಗೆ ಬೈಕ್‌ನಲ್ಲಿ ಬಂದ ಇಬ್ಬರು ಗುಂಡು ಹಾರಿಸಿ, ಪರಾರಿಯಾಗಿದ್ದಾರೆ.
ಚಿಕ್ಕಮಗಳೂರಿನ ಕೊಪ್ಪ ಮೂಲದ ಮನೀಶ್ ಶೆಟ್ಟಿ ಮಂಗಳೂರಿನಲ್ಲಿ ರೌಡಿ ಶೀಟರ್ ಆಗಿದ್ದ. ಇಲ್ಲಿ ಬಾರ್ ನಡೆಸುತ್ತಿದ್ದ. ಗುರುವಾರ ರಾತ್ರಿ 9 ಗಂಟೆಯಲ್ಲಿ ಆರ್. ಎಚ್.ಪಿ. ರಸ್ತೆಯಲ್ಲಿ ಇರುವ ತನ್ನ ಬಾರ್ ಮುಂಭಾಗ ಮನೀಶ್ ಶೆಟ್ಟಿ ನಿಂತಿದ್ದರು. ಅದೇ ವೇಳೆಗೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಗುಂಡು ಹಾರಿಸಿ ಸ್ಥಳದಿಂದ ಪಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಜನರು ಮತ್ತು ಬಾರ್ ಸಿಬ್ಬಂದಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮನೀಶ್ ಶೆಟ್ಟಿಯನ್ನು ವಾಹನದಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿ, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದರೂ ಬದುಕುಳಿಯಲಿಲ್ಲ.
ಮೃತ ಮನೀಶ್ ಶೆಟ್ಟಿ, ಮಂಗಳೂರಿನಲ್ಲಿ ರೌಡಿಶೀಟರ್ ಆಗಿದ್ದ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮತ್ತೊಂದೆಡೆ ಆರೋಪಿಗಳ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ಕಾರ್ಯಾಚರಣೆ ಕೈಗೊಂಡಿದೆ. ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆಂಟ್ರಲ್ ಡಿಸಿಪಿ ಅನುಚೇತ್ ಅವರೂ ಸ್ಥಳಕ್ಕೆ ಧಾವಿಸಿದ್ದಾರೆ.