More

    ಮೂರು ದಿನದಲ್ಲಿ ಮೊದಲ ಪಟ್ಟಿ ಬಿಡುಗಡೆ

    ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಇನ್ನು ಮೂರು ದಿನಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ ಎಂದು ಸಂಸದೀಯ ಮಂಡಳಿ ಸಮಿತಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದರು.

    ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ ಎನ್ನಲಾಗುತ್ತಿದೆ. ಇದಕ್ಕೆ ಕೇವಲ ಮೂರು ದಿನಗಳಲ್ಲಿ ಉತ್ತರ ಸಿಗಲಿದೆ. ಅರ್ಹ ಅಭ್ಯರ್ಥಿಗಳನ್ನೇ ಎಲ್ಲ ಕ್ಷೇತ್ರಗಳಲ್ಲಿಯೂ ಕಣಕ್ಕಿಳಿಸಲಾಗುವುದು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಪ್ರಧಾನಿ ನರೇಂದ್ರ ಮೋದಿ ಅವರ ಕಾರಣಕ್ಕೆ ಇಡೀ ದೇಶ ಹಾಗೂ ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣವಿದೆ. ಹೀಗಾಗಿ ಕರ್ನಾಟಕದ 28 ಕ್ಷೇತ್ರಗಳಲ್ಲೂ ಗೆಲ್ಲಲು ಬಿಜೆಪಿ ಪ್ರಯತ್ನ ಮಾಡುತ್ತಿದೆ. ಇದಕ್ಕೆ ಪೂರಕವಾದ ವಾತಾವರಣವೂ ಬಿಜೆಪಿಗಿದೆ ಎಂದರು.
    ಮಂಡ್ಯ ಕ್ಷೇತ್ರದಲ್ಲಿ ಸುಮಲತಾ ಅವರು ನಡೆಸುತ್ತಿರುವ ಸಭೆ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ಈ ಬಗ್ಗೆ ಯಾವ ಚರ್ಚೆಯೂ ಆಗಿಲ್ಲ. ರಾಮನಗರದಲ್ಲಿ ನಡೆಯುತ್ತಿರುವ ಆಪರೇಷನ್ ಹಸ್ತದ ಬಗ್ಗೆ ಪ್ರತಿಕ್ರಿಯೆ ನೀಡಲು ಬಿಎಸ್‌ವೈ ನಿರಾಕರಿಸಿದರು.
    ಶೋಭಾ ಕರಂದ್ಲಾಜೆ ಪರ ಬ್ಯಾಟಿಂಗ್: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ಹಾಗೂ ಪಿತೂರಿ ನಡೆಸಲಾಗುತ್ತಿದೆ. ಇದನ್ನು ಯಾರು ನಡೆಸುತ್ತಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿದೆ. ಇಂಥ ಷಡ್ಯಂತ್ರಗಳಿಗೆ ಶೋಭಾ ಕರಂದ್ಲಾಜೆ ಧೃತಿಗೆಡುವುದಿಲ್ಲ. ಕೇಂದ್ರ ಸಚಿವೆಯಾಗಿ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು. ಕಳೆದ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಅವರು 3.50 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಈ ಬಾರಿಯೂ ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಶೋಭಾ ಕರಂದ್ಲಾಜೆ ಗೆಲುವು ಸಾಧಿಸಲಿದ್ದಾರೆ ಎನ್ನುವ ಮೂಲಕ ಈ ಚುನಾವಣೆಯಲ್ಲೂ ಶೋಭಾ ಕರಂದ್ಲಾಜೆ ಅವರೇ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಎನ್ನುವುದನ್ನು ಸುಳಿವು ನೀಡಿದರು.
    ಬಿಜೆಪಿ ಮುಖಂಡರ ಸಭೆ: ಖಾಸಗಿ ಕಾರ್ಯಕ್ರಮದ ಅಂಗವಾಗಿ ಚಿಕ್ಕಮಗಳೂರಿಗೆ ಆಗಮಿಸಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಚಿಕ್ಕಮಗಳೂರಿನ ಪ್ರವಾಸಿ ಮಂದಿರದಲ್ಲಿ ಬಿಜೆಪಿ ನಾಯಕರ ಸಭೆ ನಡೆಸಿದರು. ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಡಾ. ನರೇಂದ್ರ, ಮುಖಂಡ ಸಿ.ಎಚ್.ಲೋಕೇಶ್ ಸೇರಿ ಇತರೆ ನಾಯಕರ ಸಭೆಯನ್ನು ನಡೆಸಿದರು. ಈ ವೇಳೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ನಡೆಯುತ್ತಿರುವ ಅಭಿಯಾನದ ಬಗ್ಗೆ ಮಾಹಿತಿ ಪಡೆದರು ಎನ್ನಲಾಗಿದೆ. ಜತೆಗೆ ಕ್ಷೇತ್ರದಲ್ಲಿ ಮುಂದೆ ಈ ರೀತಿಯ ಬೆಳವಣಿಗೆ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಬಿಜೆಪಿ ನಾಯಕರಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts