More

    5 ಗ್ಯಾರಂಟಿಗಳ ಅನುಷ್ಠಾನ ಗ್ಯಾರಂಟಿ ಎಂದ ಸಚಿವ ಈಶ್ವರ ಖಂಡ್ರೆ

    ತುಮಕೂರು: ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿರುವ ಎಲ್ಲ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಲು ಮೊದಲ ಸಚಿವ ಸಂಪುಟದಲ್ಲಿಯೇ ತಾತ್ವಿಕ ಒಪ್ಪಿಗೆ ಸೂಚಿಸಲಾಗಿದ್ದು, ಈ ಬಗ್ಗೆ ರೂಪು ರೇಶೆ ತಯಾರಿಸಲಾಗುತ್ತಿದೆ. ಶೀಘ್ರವೇ ಗ್ಯಾರಂಟಿಗಳ ಅನುಷ್ಠಾನ ಗ್ಯಾರಂಟಿ ಆಗಲಿದೆ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದರು.

    ಸಿದ್ದಗಂಗಾ ಮಠಕ್ಕೆ ಮಂಗಳವಾರ ಭೇಟಿ ನೀಡಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ನಡೆದು ಮಾದರಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

    ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳ ಜಾರಿಯಲ್ಲಿ ಯಾವುದೇ ಗೊಂದಲ ಇಲ್ಲ. ಈಗಾಗಲೇ ಮೊದಲ ಸಚಿವ ಸಂಪುಟ ಸಭೆಯಲ್ಲೇ ತಾತ್ವಿಕ ಒಪ್ಪಿಗೆ ನೀಡಿದ್ದು ಎರಡನೇ ಅನೌಪಚಾರಿಕ ಸಚಿವ ಸಂಪುಟ ಸಭೆಯಲ್ಲಿ ಅಧಿಕಾರಿಗಳಿಗೆ ಮೌಖಿಕ ಸೂಚನೆ ಕೊಟ್ಟಿದ್ದೇವೆ. ಜೂ. 1 ರಂದು ಮತ್ತೆ ಸಚಿವ ಸಂಪುಟ ಸಭೆ ನಡೆಯಲಿದ್ದು, ರೂಪುರೇಷೆಗಳು ತಯಾರಾಗುತ್ತಿವೆ. ಅದರ ಪ್ರಕಾರ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುತ್ತೇವೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಕಲ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಶಶಿಹುಲಿಕುಂಟೆ ಮಠ್, ಮಾಜಿ ಮೇಯರ್ ಗೀತಾರುದ್ರೇಶ್, ಅಖಿಲ ಭಾರತ ವೀರಶೈವ ಮಹಾಸಭಾದ ಸಾಗರನಹಳ್ಳಿ ನಟರಾಜು, ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ. ಶೇಖರ್, ಉಪಾಧ್ಯಕ್ಷ ಎಸ್.ಜಿ. ಚಂದ್ರಮೌಳಿ, ಡಿಎಫ್‌ಒ ಎಚ್.ಅನುಪಮ, ಎಸಿಎಫ್‌ಗಳಾದ ಬಿ.ಎನ್. ನಾಗರಾಜು, ಮಹೇಶ್ ವಿ. ಮಾಲಗತ್ತಿ, ಸುಬ್ಬರಾವ್, ಆರ್‌ಎಫ್‌ಒಗಳಾದ ವಿ.ಪವಿತ್ರ, ಸಿ.ರವಿ, ಎಚ್.ಎಂ.ಸುರೇಶ್, ಟಿ.ಎಂ. ರಾಕೇಶ್ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts