

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ವಲಯದ ಸಮಗ್ರ ಬೆಳವಣಿಗೆಗೆ ಗಂಭೀರ ಚಿಂತನೆ ನಡೆಸಿದ್ದು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ವಿಷನ್ ಗ್ರೂಪ್ಗಳು ಸೇರಿದಂತೆ ಹಲವು ಸಾಂಸ್ಥಿಕ ವ್ಯವಸ್ಥೆಗಳು ಇದರಲ್ಲಿ ರಚನಾತ್ಮಕ ಪಾತ್ರ ವಹಿಸಲಿವೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದರು.
ನಗರದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ(ಎಫ್ಕೆಸಿಸಿಐ)ಯಲ್ಲಿ ಶುಕ್ರವಾರ ಆಯೋಜಿಸಿದ್ದ ಸಂಸ್ಥೆಯ 18ನೇ ವರ್ಷದ 'ರಫ್ತು ಶ್ರೇಷ್ಠತಾ ಪ್ರಶಸ್ತಿ ಪ್ರದಾನ' ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೈಗಾರಿಕಾ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ಸಾಕಷ್ಟು ಉಪಕ್ರಮಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಆಟೋಮೊಬೈಲ್, ಮಾಹಿತಿ ತಂತ್ರಜ್ಞಾನ-ಜೈವಿಕ ತಂತ್ರಜ್ಞಾನ, ನ್ಯಾನೋ ತಂತ್ರಜ್ಞಾನ ಸೇರಿದಂತೆ ವಿಧದ ಕೈಗಾರಿಕೆಗಳಿಗೆ ಪೂರಕ ವಾತಾವರಣ ರಾಜ್ಯದಲ್ಲಿದೆ. ಇದರಿಂದ ರ್ತುದಾರರಿಗೆ ಕರ್ನಾಟಕ ನೆಚ್ಚಿನ ತಾಣವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಮೂಲ ಸೌಕರ್ಯಗಳನ್ನೂ ಕಲ್ಪಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿಶಾಸಕ ಶಾಮನೂರು ಶಿವಶಂಕರಪ್ಪನವರ ಮಾಲಿಕತ್ವದ ಬಾಗಲಕೋಟೆಯ ಇಂಡಿಯನ್ ಕೇನ್ ಪವರ್ ಸಕ್ಕರೆ ಕಾರ್ಖಾನೆ ಸೇರಿದಂತೆ ಹಲವು ಉದ್ಯಮಗಳಿಗೆ 'ಸ್ಟಾರ್ ಎಕ್ಸ್ಪೋರ್ಟರ್' ಪ್ರಶಸ್ತಿ ನೀಡಲಾಯಿತು. ಯುನೈಟೆಡ್ ಅರಬ್ ಎಮಿರೇಟ್ಸ್ನ 'ಸೈಫ್ ಜೋನ್' ಪ್ರಧಾನ ನಿರ್ದೇಶಕ ಸೌದ್ ಅಲ್ ಮಾರೋವಲ್, ಎಫ್ಕೆಸಿಸಿಐ ಅಧ್ಯಕ್ಷ ಬಿ.ವಿ.ಗೋಪಾಲರೆಡ್ಡಿ, ಹಿರಿಯ ಉಪಾಧ್ಯಕ್ಷ ರಮೇಶ್ಚಂದ್ರ ಲಹೋಟಿ, ಉಪಾಧ್ಯಕ್ಷ ಎಂ.ಜಿ.ಬಾಲಕೃಷ್ಣ, ಮಾಜಿ ಅಧ್ಯಕ್ಷ ಕೆ.ಲಕ್ಷ್ಮಣ, ಪ್ರಶಸ್ತಿ ಸಮಿತಿ ಅಧ್ಯಕ್ಷೆ ಉಮಾ ರೆಡ್ಡಿ ಮತ್ತಿತರರಿದ್ದರು.