

ಶ್ರೀನಗರ; ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಮಚೈಲ್ ಮಾತಾ ಯಾತ್ರೆಗೆ ತೆರಳುತ್ತಿದ್ದ ಚೋಸಿಟಿ ಗ್ರಾಮದಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ದಿಢೀರ್ ಪ್ರವಾಹ ಉಂಟಾಗಿದೆ.
ಈ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಎಲ್‌ಒಪಿ ಮತ್ತು ಸ್ಥಳೀಯ ಶಾಸಕ ಸುನಿಲ್ ಕುಮಾರ್ ಶರ್ಮಾ ಪ್ರತಿಕ್ರಿಯಿಸಿದ್ದು, ಸ್ಥಳದಲ್ಲಿ ಅಗತ್ಯ ರಕ್ಷಣಾ ಮತ್ತು ವೈದ್ಯಕೀಯ ನಿರ್ವಹಣಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ ಪ್ರವಾಹ ಪೀಡಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.
ಘಟನೆಯಲ್ಲಿ ಮೇಘಸ್ಫೋಟ ಪೀಡಿತ ಗ್ರಾಮದಿಂದ ಕನಿಷ್ಠ 12 ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಈ ಪ್ರದೇಶದಲ್ಲಿ ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯ ಬಳಿಕ ದೇವಾಲಯಕ್ಕೆ ವಾರ್ಷಿಕ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ರಕ್ಷಣಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.
(ಏಜೆನ್ಸೀಸ್)
ಘಟನೆಯಲ್ಲಿ ಮೃತಪಟ್ಟವರಿಗೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸಂತಾಪ ಸೂಚಿಸಿದ್ದಾರೆ. ಚೋಸಿಟಿ ಕಿಶ್ತ್ವಾರ್‌ನಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ನಾನು ದುಃಖಿತನಾಗಿದ್ದೇನೆ. ಮೃತರ ಕುಟುಂಬಗಳಿಗೆ ಸಂತಾಪಗಳು ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಬಲಪಡಿಸಲು ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳಲು ಪೊಲೀಸ್, ಸೇನೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಅವರು ಎಕ್ಸ್‌ನಲ್ಲಿ ತಿಳಿಸಿದ್ದಾರೆ.