More

    ಅನ್ನದಾತರಿಗೆ ಕೃಷಿ ಸೌಲಭ್ಯ ಕಲ್ಪಿಸಿ

    ಬೆಳಗಾವಿ: ಜಿಲ್ಲೆಯಲ್ಲಿ ತೀವ್ರ ಬರದಿಂದ ತತ್ತರಿಸಿರುವ ರೈತರಿಗೆ ಕೃಷಿ ಯಂತ್ರಧಾರೆ ಕೇಂದ್ರಗಳು ಹೆಚ್ಚೆಚ್ಚು ಅನುಕೂಲವಾಗುವಂತೆ ಕಾರ್ಯನಿರ್ವಹಿಸಲು ಕ್ರಮ ವಹಿಸಬೇಕು ಎಂದು ಜಿಪಂ ಸಿಇಒ ರಾಹುಲ ಶಿಂಧೆ ಸೂಚಿಸಿದರು.

    ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರೈತ ಸಮುದಾಯ ಸದ್ಯ ಬರಗಾಲ ಪರಿಸ್ಥಿತಿ ಎದುರಿಸುತ್ತಿರುವುದರಿಂದ ಕೃಷಿಗೆ ಸಂಬಂಧಿಸಿದ ಯಾವುದೇ ಕೊರತೆಗಳು ಉಂಟಾಗದಂತೆ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ರೈತರಿಂದ ಯಾವುದೇ ದೂರುಗಳು ಬರದಂತೆ ಕಟ್ಟುನಿಟ್ಟಾಗಿ ಕ್ರಮವಹಿಸಬೇಕು ಎಂದು ಸೂಚಿಸಿದರು.

    ಜಿಲ್ಲೆಯಲ್ಲಿ ಪಿಎಂಎಫ್‌ಎಂಇ (ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ) ಯೋಜನೆಯಡಿ 514 ಫಲಾನುಭವಿಗಳಿಗೆ ಸಹಾಯಧನದೊಂದಿಗೆ ಸಾಲ ಮಂಜೂರಾತಿ ನೀಡಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಈ ಯೋಜನೆಯಡಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಹಾಗೂ ದೇಶದಲ್ಲಿ ಐದನೇ ಸ್ಥಾನ ಪಡೆದಿದೆ ಎಂದು ಪ್ರಶಂಸಿಸಿದರು.

    ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಡಿ, ಪ್ರಸಕ್ತ ಮುಂಗಾರು ಹಂಗಾಮಿನ ಜೂನ್‌ನಲ್ಲಿ ಮಳೆ ಕೊರತೆ ಉಂಟಾಗಿ ಬಿತ್ತನೆ ಕಾರ್ಯಕ್ಕೆ ಹಿನ್ನಡೆಯಾಗಿತ್ತು. ಆದರೆ, ಜುಲೈನಲ್ಲಿ ಬಂದಂತಹ ಮಳೆಯಿಂದ ಶೇ.95 ರಷ್ಟು ಬಿತ್ತನೆ ಸಾಧ್ಯವಾಯಿತು. ಆಗಸ್ಟ್ ಹಾಗೂ ಸೆಪ್ಟೆಂಬರ್‌ನಲ್ಲಿ ಮತ್ತೆ ಮಳೆ ಕೊರತೆ ಉಂಟಾಗಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾದ ಸುಮಾರು 3.54 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ವರದಿಯಾಗಿದೆ. 410.11 ಕೋಟಿ ರೂ. ಪರಿಹಾರ ಬೆಳೆ ಹಾನಿ ಪರಿಹಾರ ಕೋರಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರದಿಂದ ಬರಗಾಲದಿಂದ ಹಾನಿಗೊಳಗಾದ ರೈತರಿಗೆ ಬೆಳೆ ಸಮೀಕ್ಷೆ ಹಾಗೂ ್ರೂಟ್ಸ್ ತಂತ್ರಾಂಶದ ಮೂಲಕ 2000 ರೂ. ರಂತೆ ಪರಿಹಾರ ವಿತರಣೆ ಕಾರ್ಯ ಪ್ರಗತಿಯಲ್ಲಿದೆ ಎಂದರು.

    ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುರಗೋಡ ಮಾತನಾಡಿ, ಜಿಲ್ಲೆಯಲ್ಲಿ 11.69 ಲಕ್ಷ ಹೆಕ್ಟೇರ್ ಸಾಗುವಳಿ ಕ್ಷೇತ್ರವಿದ್ದು, ಈ ಪೈಕಿ 59,091 ಹೆಕ್ಟೇರ್ ತೋಟಗಾರಿಕೆ ಕ್ಷೇತ್ರವಿದೆ. ನರೇಗಾದಡಿ ಅನೇಕ ತೋಟಗಾರಿಕೆ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ತೋಟಗಾರಿಕೆ ಕ್ಷೇತ್ರದಲ್ಲಿ ರೈತರ ಮಕ್ಕಳಿಗೆ 10 ತಿಂಗಳ ಅವಧಿಯ ತೋಟಗಾರಿಕೆ ಬೆಳೆಗಳ ಬೇಸಾಯ ಆಧಾರಿತ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

    ಬೆಳಗಾವಿ ವಿಭಾಗ ಕೃಷಿ ಇಲಾಖೆ ಉಪನಿರ್ದೇಶಕ ಎಸ್.ಬಿ. ಕೊಂಗವಾಡ, ಚಿಕ್ಕೋಡಿ ವಿಭಾಗ ಕೃಷಿ ಇಲಾಖೆ ಉಪ ನಿರ್ದೇಶಕ ಎಚ್.ಡಿ. ಕೊಳೆಕರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts