More

    ಭಾರತಕ್ಕೆ ಮೋದಿ ಕೊಡುಗೆ ಅಪಾರ

    ಬೆಳಗಾವಿ: ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅಪಾರ ಕೊಡುಗೆ ನೀಡಿದ್ದಾರೆ. ಕರೊನಾ ಸೋಂಕು ಹರಡುವಿಕೆ ನಿಯಂತ್ರಣದಲ್ಲಿ ಇಡೀ ಜಗತ್ತು ಮೆಚ್ಚುವಂತಹ ಕೆಲಸ ಮಾಡಿದ್ದಾರೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

    ಕೇಂದ್ರ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. 2014ರಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದ ಮೋದಿ ಅವರು, ಹಲವು ಜನಪರ ಯೋಜನೆಗಳ ಮೂಲಕ ದೇಶದ ಚಿತ್ರಣವನ್ನೇ ಬದಲಿಸಿದ್ದರು. ಬಳಿಕ 2ನೇ ಅವಧಿಯಲ್ಲೂ ಅಭಿವೃದ್ಧಿ ಕೆಲಸಗಳಿಗೆ ವೇಗ ನೀಡಿದ್ದಾರೆ. ಭಾರತದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮೋದಿ ಅವರು ಎಲ್ಲ ವರ್ಗಗಳ ಸಂಕಷ್ಟಕ್ಕೆ ಮಿಡಿದಿದ್ದಾರೆ. ದೇಶ ಅಭಿವೃದ್ಧಿಯಲ್ಲಿ ವೇಗ ಸಾಧಿಸಿದೆ ಎಂದರು.

    ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ದೇಶದಲ್ಲಿ 9.67 ಕೋಟಿ ರೈತರ ಬ್ಯಾಂಕ್ ಖಾತೆಗೆ ತಲಾ 6 ಸಾವಿರ ರೂ. ಸಹಾಯಧನ ಜಮೆ ಮಾಡಿದ್ದಾರೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನರಿಗೆ ನೆರವಾಗುವ ನಿಟ್ಟಿನಲ್ಲಿ 20 ಲಕ್ಷ ಕೋಟಿ ರೂ. ಮೊತ್ತದ ಬೃಹತ್ ಪ್ಯಾಕೇಜ್ ಘೋಷಿಸಿದ್ದಾರೆ. ಅಲ್ಲದೆ ಕಳೆದ ವರ್ಷ ನೆರೆಯಿಂದ ತತ್ತರಿಸಿದ್ದ ರಾಜ್ಯಕ್ಕೆ 1,869 ಕೋಟಿ ರೂ. ಪರಿಹಾರ ನೀಡಿದ್ದಾರೆ ಎಂದು ತಿಳಿಸಿದರು. ಜಮ್ಮು-ಕಾಶ್ಮೀರ ರಾಜ್ಯಕ್ಕೆ ಅನ್ವಯವಾಗುತ್ತಿದ್ದ ವಿಶೇಷ ಅಧಿಕಾರ ರದ್ದುಗೊಳಿಸಿ, ಲಡಾಖ್ ಮತ್ತು ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳನ್ನು ರಚಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರೂ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡುವ ಮೂಲಕ ಕೇಂದ್ರಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.

    ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ ಕೋರೆ, ಶಾಸಕ ಅನಿಲ ಬೆನಕೆ, ಶಶಿಕಾಂತ ಪಾಟೀಲ, ಎಂ.ಬಿ.ಝಿರಲಿ, ರಾಜೇಂದ್ರ ಹರಕುಣಿ ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.

    100 ಜೋಡಿ ರೈಲು ಸಂಚಾರ

    ದೇಶದಲ್ಲಿ ಸೋಮವಾರದಿಂದ 100 ಜೋಡಿ ರೈಲುಗಳ ಸಂಚಾರ ಆರಂಭವಾಗಿದೆ. ಬೇಡಿಕೆಗೆ ತಕ್ಕಂತೆ ಹಂತ ಹಂತವಾಗಿ ಹೆಚ್ಚಿನ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ ಅಂಗಡಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts