More

    ಭಾರತ ಬಲಿಷ್ಠ ರಾಷ್ಟ್ರವಾಗಲು ಸಂವಿಧಾನವೇ ಅಡಿಪಾಯ

    ಬೆಳಗಾವಿ: ಡಾ.ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ, ಚಿಂತನೆಯ ಫಲವಾಗಿ ನಾವಿಂದು ಜಗತ್ತಿಗೆ ಮಾದರಿಯಾದ ಸಂವಿಧಾನದ ವಾರಸುದಾರರಾಗಿದ್ದೇವೆ. ಪರಕೀಯರ ಆಡಳಿತದಲ್ಲಿದ್ದ ಭಾರತವು ಕೇವಲ 75 ವರ್ಷಗಳಲ್ಲಿ ಜಗತ್ತಿನ ಬಲಿಷ್ಠ ಪ್ರಜಾತಂತ್ರ ರಾಷ್ಟ್ರವಾಗಿ ಹೊರಹೊಮ್ಮಲು ಸಂವಿಧಾನವೇ ಬುನಾದಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

    ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವದಲ್ಲಿ ಸಂದೇಶ ನೀಡಿದ ಅವರು, ಸಾಮಾಜಿಕ ನ್ಯಾಯ, ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ. ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳ ಕುರಿತು ನಾಗರಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲೆ 500 ಗ್ರಾಪಂ, 38 ನಗರ ಸ್ಥಳೀಯ ಸಂಸ್ಥೆಗಳಿಗೆ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರವು ಭೇಟಿ ನೀಡುವ ಮೂಲಕ ಅಲ್ಲಿನ ಜನರಲ್ಲಿ ಸಂವಿಧಾನದ ಕುರಿತು ಜಾಗೃತಿ ಮೂಡಿಸಲಿದೆ ಎಂದರು.
    ಸಂವಿಧಾನ ದಿನ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾ ರಾಷ್ಟ್ರೀಯ ಮಟ್ಟದ ಸಮಾವೇಶ ಫೆಬ್ರವರಿ 25ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಜಗತ್ತಿಗೆ ಸಾಂಸ್ಕೃತಿಕ, ಸಾಮಾಜಿಕ ಮತ್ತು ರಾಜಕೀಯ ಚಿಂತನೆಗಳಿಗೆ ಹೊಸ ದಿಕ್ಕು ನೀಡಿದ ವಚನ ಚಳವಳಿಯ ನಾಯಕ ಬಸವಣ್ಣನವರನ್ನು ನಮ್ಮ ಸರ್ಕಾರವು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆ ಎಂದರು.

    ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ವಿವಿಧ ಇಲಾಖೆಗಳ ಕಟ್ಟಡಗಳನ್ನು ತೆರವುಗೊಳಿಸಿ ಒಂದು ಸುಸಜ್ಜಿತವಾದ ಜಿಲ್ಲಾ ಕಚೇರಿಗಳ ಸಂಕೀರ್ಣ ಕಟ್ಟಡವನ್ನು ಸುಮಾರು 200 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಕಾಮಗಾರಿ ಆರಂಭಿಸಲು ಕನಿಷ್ಠ 3 ತಿಂಗಳು ಸಮಯ ಅವಕಾಶ ಬೇಕು. ಹಾಗಾಗಿ, ಲೋಕಸಭೆ ಚುನಾವಣೆ ಬಳಿಕ ಕಾಮಗಾರಿಗೆ ಚಾಲನೆ ದೊರೆಯಲಿದೆ. ರಾಷ್ಟ್ರೀಯ ಹೆದ್ದಾರಿ-48 ಗಾಂಧಿ ನಗರದಿಂದ ರಾಣಿ ಚನ್ನಮ್ಮ ವೃತ್ತದವರೆಗೆ ಅಂದಾಜು 350 ಕೋಟಿ ರೂ.ವೆಚ್ಚದಲ್ಲಿ ಫ್ಲೈಓವರ್ ನಿರ್ಮಿಸಲು ಯೋಜಿಸಲಾಗಿದೆ ಎಂದು ತಿಳಿಸಿದರು.

    ಹುದಲಿ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಇರುವ ಮ್ಯಾನುವಲ್ ರೈಲ್ವೆ ಗೇಟ್‌ನ್ನು, ರೈಲ್ವೆ ಮೇಲ್ಸೇತುವೆಯನ್ನಾಗಿ ಪರಿವರ್ತಿಸಲು 35 ಕೋಟಿ ರೂ.ಅಂದಾಜು ಮೊತ್ತದ ಕಾಮಗಾರಿ ಅನುಷ್ಠಾನಗೊಳಿಸಲಾಗುವುದು. ನಿಲಜಿಯಿಂದ ಸಾಂಬ್ರಾ ವಿಮಾನ ನಿಲ್ದಾಣವರೆಗೆ ದ್ವಿಪಥದಿಂದ ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು 58 ಕೋಟಿ ರೂ. ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಶೀಘ್ರ ಅನುಮೋದನೆ ಪಡೆದು ಕಾರ್ಯಗತಗೊಳಿಸಲಾಗುವುದು ಎಂದು ತಿಳಿಸಿದರು.

    ಬೆಳಗಾವಿ ನಗರದಲ್ಲಿ ಒಂದು ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲು 60 ಕೋಟಿ ರೂ. ಅಂದಾಜು ಮೊತ್ತದ ಯೋಜನೆ ತಯಾರಿಸಲಾಗಿದ್ದು, ಪ್ರಸಕ್ತ 2023-24ನೇ ಸಾಲಿನಲ್ಲಿ 10 ಕೋಟಿ ರೂ.ಕಾಮಗಾರಿ ಕೈಗೊಂಡು ಮುಂಬರುವ ಸಾಲಿನಲ್ಲಿ ಹಂತ ಹಂತವಾಗಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು ಎಂದರು.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ವಿಭಾಗದಿಂದ ಜಿಲ್ಲೆಯಲ್ಲಿ ಬೆಳಗಾವಿ ನಗರದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸೇರಿ 19 ಸರ್ಕಾರಿ ಆರೋಗ್ಯ ಸಂಸ್ಥೆಗಳ ಕಟ್ಟಡ ಕಾಮಗಾರಿಗಳು ಅಂದಾಜು 332 ಕೋಟಿ ರೂ.ವೆಚ್ಚದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನಾರೋಗ್ಯ-ಆರೋಗ್ಯ ಕರ್ನಾಟಕ ಯೋಜನೆಯಡಿ ಇಲ್ಲಿಯವರೆಗೆ ಒಟ್ಟು 3.72 ಲಕ್ಷ ಫಲಾನುಭವಿಗಳಿಗೆ 350 ಕೋಟಿ ರೂ.ವಿನಿಯೋಗಿಸಲಾಗಿದೆ ಎಂದರು. ಸಂಸದೆ ಮಂಗಲ ಅಂಗಡಿ, ಶಾಸಕರಾದ ರಾಜು ಸೇಠ್, ಮಹೇಂದ್ರ ತಮ್ಮಣ್ಣವರ, ಮೇಯರ್ ಶೋಭಾ ಸೋಮನಾಚೆ, ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಮಹಾನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ, ಎಸ್‌ಪಿ ಡಾ.ಭೀಮಾಶಂಕರ ಗುಳೇದ, ಜಿಪಂ ಸಿಇಒ ರಾಹುಲ ಶಿಂಧೆ ಇತರರಿದ್ದರು.

    ಪರೇಡ್‌ನಲ್ಲಿ ಮಕ್ಕಳ ಕಲರವ

    ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಗಣರಾಜ್ಯೋತ್ಸವದಲ್ಲಿ ನಾಗರಿಕ ಪೊಲೀಸ್ ಪಡೆ, ಕೆಎಸ್‌ಆರ್‌ಪಿ ಪುರುಷ ಮತ್ತು ಮಹಿಳಾ ತುಕಡಿ, ಅಬಕಾರಿ ಇಲಾಖೆ, ಗೃಹರಕ್ಷಕ ದಳ, ಎನ್‌ಸಿಸಿ ಭಾರತ ಸೇವಾದಳ, ಮಾಹೇಶ್ವರಿ ಅಂಧ ಮಕ್ಕಳ ಶಾಲೆ ಸೇರಿ ವಿವಿಧ ಶಾಲಾ ಮಕ್ಕಳು ಪರೇಡ್‌ನಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts