ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಬೆಳಗಾವಿ: ನಗರದಲ್ಲಿರುವ ಅಪಾಯಕಾರಿ ಮರಗಳನ್ನು ಕಟಾವು ಮಾಡಲು ನಿರ್ಲಕ್ಷೃ ತೋರುತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸೋಮವಾರ ಡಿಸಿ ಕಚೇರಿ ಆವರಣದಲ್ಲಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಪಾಯಕಾರಿ ಮರಗಳನ್ನು ತೆಗೆಯುವಂತೆ ನಾಗರಿಕರು ನೀಡಿದ ದೂರುಗಳ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಮರಗಳ ಕಟಾವಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮಹಾನಗರ ಪಾಲಿಕೆಗೆ ಪತ್ರ ಬರೆದು ಕೈತೊಳೆದುಕೊಳ್ಳುತ್ತಿದ್ದಾರೆ.

ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಕೊಳ್ಳಬೇಕು. ಬರುವ ದಿನಗಳಲ್ಲಿ ಬಿರುಗಾಳಿ ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಬೆಳಗಾವಿಯಲ್ಲಿರುವ ಅಪಾಯಕಾರಿ ಮರಳನ್ನು ಕಟಾವು ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಕೂಡಲೇ ಜಿಲ್ಲಾಡಳಿತ ಮಧ್ಯಪ್ರವೇಶಿಸಿ ಹೆಸ್ಕಾಂ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳ ಜಂಟಿ ಸಭೆ ಕರೆದು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.

ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಪದಾಧಿಕಾರಿಗಳಾದ ಎಂ.ಜಿ.ಮಕಾನದಾರ, ಶಿವಪ್ಪ ಶಮರಂತ, ರಾಜು ಕುಸೋಜಿ, ಜಿನೇಶ ಅಪ್ಪಣ್ಣವರ, ವಿನಾಯಕ ನರಗಟ್ಟಿ, ನಿತಿನ್ ಮುಖರಿ, ವಿಶ್ವನಾಥ ಕೋಟಗಿ ಮತ್ತು ವೀರೇಂದ್ರ ಗೊಬರಿ ಇತರರು ಇದ್ದರು.

ಪೋಟೋ: 29ಮಂಜು3: ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕ್ರಿಯಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಎಂ.ಜಿ.ಮಕಾನದಾರ, ಶಿವಪ್ಪ ಶಮರಂತ ಇತರರು ಇದ್ದರು.