ಹೈದರಾಬಾದ್: ಅವಿಭಜಿತ ಆಂಧ್ರಪ್ರದೇಶ ಕಾಂಗ್ರೆಸ್ನ ಮಾಜಿ ಅಧ್ಯಕ್ಷ, ಮಾಜಿ ಸಂಸದ (ರಾಜ್ಯಸಭೆ), ಧರ್ಮಪುರಿ ಶ್ರೀನಿವಾಸ್ (76) ಶನಿವಾರ (ಜೂನ್ 29) ನಿಧನರಾಗಿದ್ದಾರೆ. ಮೃತರಿಗೆ ಇಬ್ಬರು ಪುತ್ರರಿದ್ದು, ಓರ್ವ ಪುತ್ರ ಇತ್ತೀಚಿಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾಗಿದ್ದರು.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗೆ ಶನಿವಾರ (ಜೂನ್ 29) ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.
ಶ್ರೀನಿವಾಸ್ ಅವರು 2004ರಿಂದ 2009ರವರೆಗೆ ಆಂಧ್ರಪ್ರದೇಶ(ಅವಿಭಜಿತ) ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿದ್ದರು. ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ್ ರೆಡ್ಡಿ ಅವರ ಸಂಪುಟದಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ನಂತರದ ದಿನಗಳಲ್ಲಿ ಕಾಂಗ್ರೆಸ್ ತೊರೆದು ಬಿಆರ್‌ಎಸ್ ಪಕ್ಷ ಸೇರಿದ ಅವರು 2016 ರಿಂದ 2022ರವರೆಗೆ ರಾಜ್ಯಸಭಾ ಸದಸ್ಯರಾಗಿದ್ದರು. ಇತ್ತೀಚೆಗೆ ಮರಳಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು.