ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಜೆಡಿಎಸ್​ ಮೈತ್ರಿ ಬಗ್ಗೆ ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ

HDK
Published on

ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋಲುಕಂಡಿರುವ ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು​ ಲೋಕಸಭಾ ಚುನಾವಣೆಗೆ ಹೋಗಲಿವೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ. ಈ ಕುರಿತಾಗಿ ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಊಹಾಪೋಹ ಮಾಮೂಲಿ. ಇದೆಲ್ಲಾ ಗಾಳಿ ಸುದ್ದಿ, ಆ ರೀತಿಯ ಯಾವುದೇ ಚರ್ಚೆ ಆಗುತ್ತಿಲ್ಲ. ಈ ವಿಚಾರವನ್ನ ನನ್ನ ಮುಂದೆ ಯಾರೂ ಪ್ರಸ್ತಾಪ ಮಾಡಿಲ್ಲ. ಲೋಕಸಭಾ ಚುನಾವಣೆ ಬಗ್ಗೆ ನಾನು ಜಿಲ್ಲಾವಾರು ಸಭೆ ಮಾಡಿದ್ದೇನೆ. ಗೆದ್ದವರು, ಸೋತವರ ಜೊತೆ ಮಾತನಾಡಿದ್ದೇನೆ. ಯಾವ ರೀತಿ ಚುನಾವಣೆ ಎದುರಿಸಬೇಕು ಎಂಬುದರ ಕುರಿತು ರೂಪುರೇಷೆ ಸಿದ್ಧ ಮಾಡುತ್ತಿದ್ದೇವೆ ಎಂದಿದ್ದಾರೆ.

ನನಗೆ ರಾಜಕಾರಣದ ಮೇಲೆ ಒಲವಿಲ್ಲ.ಕಳೆದ ಬಾರಿಯೂ ನನಗೆ ಚುನಾವಣೆ ಎದುರಿಸುವ ಆಸಕ್ತಿ ಇರಲಿಲ್ಲ. ಆದರೆ ಕಾರ್ಯಕರ್ತರ ಒತ್ತಾಸೆಯಿಂದ ರಾಜಕಾರಣದಲ್ಲಿದ್ದೇನೆ. ನಂದುಬಿಡಿ ಹಾಲಿ ಸಂಸದರ ಕಥೆಯೇ ಕೇಳಿ. ಭ್ರಷ್ಟಾಚಾರದ ಮಧ್ಯೆ ಚುನಾವಣೆ ಬೇಡ ಅಂತಿದ್ದಾರೆ. ಅಂತವರೇ ಚುನಾವಣೆ ಬೇಡ ಅಂತ ಹೇಳ್ತಿರುವಾಗ ನಮ್ದೆಲ್ಲ ಯಾವ ಲೆಕ್ಕ ಎಂದು ಸಂಸದ ಡಿ.ಕೆ.ಸುರೇಶ್ ಹೆಸರು ಹೇಳದೆ ಟಾಂಗ್ ಕೊಟ್ಟಿದ್ದಾರೆ.

ನಿನ್ನೆ ಶಕ್ತಿ ಯೋಜನೆಗೆ ಚಾಲನೆ ವಿಚಾರವಾಗಿ ಮಾತನಾಡಿ, ಸರ್ಕಾರದ ಐದು ಗ್ಯಾರಂಟಿ ಯೋಜನೆ ಬಗ್ಗೆ ಚರ್ಚೆ ಮಾಡಲು ಇನ್ನೂ ಸಮಯ ಇದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ ಅಂತಿದ್ದಾರೆ. ಅದರೆ ಫಲಾನುಭವಿಗಳಿಗೆ ಹೇಗೆ ತಲುಪಿಸುತ್ತಾರೆ ಅನ್ನೋದು ಮುಖ್ಯ. ಈಗಾಗಲೇ ಬಾಡಿಗೆದಾರರಿಗೆ ಉಚಿತ ವಿದ್ಯುತ್ ಇಲ್ಲ ಅಂತಿದ್ರು. ಆಮೇಲೆ ಕೊಡ್ತೀವಿ ಅಂದ್ರು. ಈಗ ಮಾಲೀಕರು ಬಾಡಿಗೆದಾರರು ಅಗ್ರಿಮೆಂಟ್ ಕೊಡುತ್ತಿಲ್ಲ. ನಾನಾ ಸಮಸ್ಯೆಗಳು ಉದ್ಭವ ಆಗುತ್ತಿವೆ. ಘೋಷಣೆ ಮಾಡಿದಾಗ ನನಗೂ ಫ್ರೀ, ನಿನಗೂ ಫ್ರೀ ಅಂದ್ರಿ.! ಈಗ ಅದನ್ನ ಯಾವರೀತಿ ನಿಭಾಸ್ತಾರೆ ನೋಡಬೇಕು ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net