

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ( S M Krishna ) ಅವರು ವಯೋಸಹಜ ಕಾಯಿಲೆಯಿಂದ ತಡರಾತ್ರಿ ಕೊನೆಯುಸಿರೆಳೆದರು. ರಾಜ್ಯ ಕಂಡ ಧೀಮಂತ ನಾಯಕನ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ. ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಧೀಮಂತ ಮುತ್ಸದ್ಧಿ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು, ಮಾಜಿ ಕೇಂದ್ರ ವಿದೇಶಾಂಗ ಸಚಿವರು, ಪಕ್ಷದ ಹಿರಿಯ ನಾಯಕ, ಪದ್ಮವಿಭೂಷಣ ಶ್ರೀ ಎಸ್.ಎಂ.ಕೃಷ್ಣ ಅವರು ನಮ್ಮನ್ನು ಬಿಟ್ಟು ಅಗಲಿದ ಸುದ್ದಿ ತಿಳಿದು ಅತೀವ ಆಘಾವಾಗಿದೆ. ರಾಷ್ಟ್ರ, ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ನಾಯಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯಿಂದ ವೈಯಕ್ತಿಕವಾಗಿ ಒಬ್ಬ ಹಿರಿಯಣ್ಣನನ್ನು ಕಳೆದುಕೊಂಡ ನೋವು ನನಗಾಗಿದೆ. ಶ್ರೀ ಎಸ್.ಎಂ.ಕೃಷ್ಣ ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತಾ, ಅಗಲಿದ ಆ ಹಿರಿಯ ಚೇತನಕ್ಕೆ ದೇವರು ಉತ್ತಮ ಸದ್ಗತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು, ಅಪಾರ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದಾರೆ.
ರಾಜ್ಯದ ವಿಧಾನಸಭಾಧ್ಯಕ್ಷರು, ಉಪ ಮುಖ್ಯಮಂತ್ರಿಗಳು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯಪಾಲರೂ ಸೇರಿದಂತೆ ಅನೇಕ ಉನ್ನತ ಹುದ್ದೆಗಳಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ರಾಜ್ಯಕ್ಕೆ, ದೇಶಕ್ಕೆ ತಮ್ಮದೇ ಆದ ಅನುಪಮ ಕೊಡುಗೆ ನೀಡಿದ್ದ ಹಿರಿಯರು, ಮುತ್ಸದ್ದಿಗಳಾದ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವುಂಟಾಯಿತು. ವೈಯಕ್ತಿಕವಾಗಿ ನನಗೆ ಅವರ ಅಗಲಿಕೆ ಬಹಳ ದುಃಖ ಉಂಟು ಮಾಡಿದೆ. ಆ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ರಾಜ್ಯದ ಜನತೆಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.
ರಾಜ್ಯದ ಶ್ರೇಷ್ಠ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿ ಗುರುತಿಸಲ್ಪಡುವ, ಹಿರಿಯ ಮುತ್ಸದ್ದಿ, ಶ್ರೀ ಎಸ್ಎಂ ಕೃಷ್ಣ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಇಹಾಕಾಯವನ್ನು ಅಗಲಿದ ಅವರಾತ್ಮಕ್ಕೆ ಭಗವಂತ ಮೋಕ್ಷ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಅಗಲಿಕೆಯ ದುಃಖವನ್ನು ಸೈರಿಸುವ ಶಕ್ತಿ ಅವರ ಕುಟುಂಬ ಮಿತ್ರ ವರ್ಗಕ್ಕೆ, ಅಭಿಮಾನಿ ವರ್ಗಕ್ಕೆ ಮತ್ತು ರಾಜ್ಯದ ಜನತೆಗೆ ಕರುಣಿಸಲಿ ಎಂದು ಪ್ರಾರ್ಥಿಸೋಣ ಎಂದು ಬಿಜೆಪಿ ನಾಯಕ ಸಿಟಿ ರವಿ ಸಂತಾಪ ಸೂಚಿಸಿದ್ದಾರೆ.