ಮಾಜಿ ಮುಖ್ಯಮಂತ್ರಿಗಳ ಪುತ್ರರ ಸೆಣಸಾಟ

>

ಬಿ.ನರಸಿಂಹ ನಾಯಕ್ ಬೈಂದೂರು
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನೇರ ಹಣಾಹಣಿ ಇರುವುದು ಬಿಜೆಪಿ ಮತ್ತು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ನಡುವೆ. ಬೈಂದೂರು ಭಾಗದಲ್ಲಿ ಜೆಡಿಎಸ್ ಸಂಘಟನಾತ್ಮಕವಾಗಿ ದುರ್ಬಲವಾಗಿದೆ. ಕಾಂಗ್ರೆಸ್ ಮಾತ್ರ ಬಿಜೆಪಿಗೆ ಸಮಬಲದ ಹೋರಾಟ ಕೊಡಲು ಶಕ್ತವಾಗಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಎಲ್ಲ ಹಂತದ ನಾಯಕರು, ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ಬೆಂಬಲಕ್ಕೆ ನಿಂತಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಏ.23ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಮತದಾರರೂ ತಮ್ಮ ತೀರ್ಪು ದಾಖಲಿಸಲಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಮತ್ತು ಬಿಜೆಪಿ ಮತಗಳಿಕೆ ಅಂತರ ಹೆಚ್ಚಿಸಿಕೊಂಡು ವಿಜಯಶಾಲಿಯಾಗುವ ಗುರಿಯೊಂದಿಗೆ ತೀವ್ರ ಪೈಪೋಟಿ ನಡೆಸಿವೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ, ಮೈತ್ರಿಕೂಟದ ಅಭ್ಯರ್ಥಿಯಾಗಿ ಜೆಡಿಎಸ್‌ನ ಮಧು ಬಂಗಾರಪ್ಪ ಕಣದಲ್ಲಿದ್ದಾರೆ. ಇವರಿಬ್ಬರೂ ಮಾಜಿ ಮುಖ್ಯಮಂತ್ರಿಗಳಿಬ್ಬರ ಪುತ್ರರು ವಿಶೇಷ. ಹಿಂದಿನ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ಜಯ ಗಳಿಸಿದ್ದರು. ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾದ ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನ.3ರ ಉಪಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಪ್ರತಿಸ್ಪರ್ಧಿ ಜೆಡಿಎಸ್‌ನ ಮಧು ಬಂಗಾರಪ್ಪ ಅವರನ್ನು ಪರಾಭವಗೊಳಿಸಿದ್ದರು.

ಎರಡೂ ಪಕ್ಷಗಳ ನಾಯಕರು ಮನೆಮನೆ ಭೇಟಿ, ಕೆಲವೆಡೆ ಬಹಿರಂಗ ಸಭೆ ನಡೆಸಿ ಬಿರುಸಿನ ಪ್ರಚಾರದ ಮೂಲಕ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿಸುವ ಕೆಲಸ ಮಾಡಿದ್ದಾರೆ. ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ (ಬಿಜೆಪಿ) ಮತ್ತು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ (ಮೈತ್ರಿಕೂಟ) ಮುಂದಾಳತ್ವ ವಹಿಸಿಕೊಂಡು ವ್ಯೆಹ ಹೆಣೆದಿದ್ದಾರೆ.

ಬೈಂದೂರು ತಾಲೂಕಿನ ವ್ಯಾಪ್ತಿಯಲ್ಲಿ 243 ಮತ್ತು 3 ಹೆಚ್ಚುವರಿ ಮತಗಟ್ಟೆಗಳನ್ನು ಗುರುತಿಸಲಾಗಿದೆ.