More

    ರಮೇಶ್‌ಕುಮಾರ್ ಹೇಳಿಕೆಯಿಂದ ಕಾಂಗ್ರೆಸ್ ಬೆತ್ತಲೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಲೇವಡಿ

    ಶಿವಮೊಗ್ಗ: ಕಾಂಗ್ರೆಸ್ ಹಿರಿಯ ನಾಯಕ ರಮೇಶ್‌ಕುಮಾರ್ ಹೇಳಿಕೆಯಿಂದ ಕಾಂಗ್ರೆಸ್ ಇಡೀ ದೇಶದಲ್ಲಿ ಬೆತ್ತಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಇದಕ್ಕಿಂತ ಸಾಕ್ಷಿ ಮತ್ತೊಂದು ಬೇಕಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದರು.
    ಶಿಕಾರಿಪುರ ತಾಲೂಕಿನ ಅಂಜನಾಪುರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಅನೇಕ ವರ್ಷಗಳಿಂದ ಹಣ ಮಾಡಿಕೊಂಡು ಬಂದಿದ್ದಾರೆ. ರಮೇಶ್‌ಕುಮಾರ್ ಅವರೇ ಸ್ವತಃ ಮತ್ತೊಮ್ಮೆ ತಾವು ನೀಡಿದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದೇ ವಿಷಯವನ್ನಿಟ್ಟುಕೊಂಡು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಜನರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.
    ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಕುಮ್ಮಕ್ಕು ಕೊಟ್ಟಿದೆ. ಮುಂದೆಯೂ ಕೊಡಲಿದೆ ಎಂಬುದು ಸಾಬೀತಾಗಿದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದ ಪರ ಇರುತ್ತದೆ ಎಂಬುದಕ್ಕೆ ರಮೇಶ್‌ಕುಮಾರ್ ಹೇಳಿಕೆ ಸಾಕ್ಷಿಯಾಗಲಿದೆ. ಕಾಂಗ್ರೆಸ್ ಸರ್ಕಾರ ಮತ್ತೊಮ್ಮೆ ಬೇಕಾ ಎಂಬುದನ್ನು ರಾಜ್ಯದ ಜನತೆ ತೀರ್ಮಾನಿಸಲಿ ಎಂದರು.
    ಸಿದ್ದು, ಡಿಕೆಶಿ ಇಬ್ಬರೂ ಸಿಎಂ ಆಗಲ್ಲ: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿಯವರೇ ಮತ್ತೊಮ್ಮೆ ಸಿಎಂ ಆಗಲಿದ್ದಾರೆ. ಆದರೆ ಅಧಿಕಾರಕ್ಕೆ ಬಾರದೆಯೇ ಸಿಎಂ ಖುರ್ಚಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಕಚ್ಚಾಡಿಕೊಳ್ಳುತ್ತಿದ್ದಾರೆ. ಇಬ್ಬರೂ ಯಾವುದೇ ಕಾರಣಕ್ಕೂ ಸಿಎಂ ಆಗುವುದಿಲ್ಲ. ಆ ಬಗ್ಗೆ ನನಗೆ ವಿಶ್ವಾಸವಿದೆ ಎಂದು ಯಡಿಯೂರಪ್ಪ ಹೇಳಿದರು.
    ಎಐಸಿಸಿ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆ ನಡೆಸುತ್ತಿದೆ. ತಪ್ಪು ಮಾಡದಿದ್ದರೆ ಯಾಕೆ ಹೆದರಬೇಕು. ತಪ್ಪು ಮಾಡದಿದ್ದರೆ ಚಿಂತೆ ಮಾಡುವ ಅಗತ್ಯವಿಲ್ಲ. ಇಡಿ ವಿಚಾರಣೆ ನಡೆಸಿದರೂ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದು ಕಾಂಗ್ರೆಸ್‌ಗೆ ಶೋಭೆ ತರುವುದಿಲ್ಲ ಎಂದರು.
    ಇದೇ ವೇಳೆ ಶಾಸಕ ಕೆ.ಎಸ್.ಈಶ್ವರಪ್ಪ ಅವರು ಆರೋಪಮುಕ್ತರಾಗಿದ್ದು ಮತ್ತೆ ಸಚಿವ ಸ್ಥಾನ ಕೊಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀರ್ಮಾನ ಮಾಡುತ್ತಾರೆ. ಆರೋಪದಿಂದ ಮುಕ್ತರಾಗಿ ಹೊರಬಂದ ದಿನವೇ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದೇನೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts