ಜನರ ಬದುಕೇ ಹಾಲಾಹಲ, ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

kumaraswamy
Published on

ಬೆಂಗಳೂರು: ಸರ್ಕಾರ ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಹಾಲಿನ ದರ ಏರಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ, ಸರಕಾರ ಹಾಲಿನ ಬೆಲೆಯನ್ನೂ ಲೀಟರಿಗೆ 3ರೂ. ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಹಾಕಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ. ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: VIDEO | ಮರದ ಎಲೆಗಳನ್ನು ತಿಂದ ಸಿಂಹ, ದೃಶ್ಯ ನೋಡಿ ಹುಬ್ಬೇರಿಸಿದ ನೆಟ್ಟಿಗರು..!

ಚುನಾವಣೆಗೆ ಮುನ್ನ ಬೆಲೆ ಏರಿಕೆ ಬಗ್ಗೆ ಕಾಂಗ್ರೆಸ್ ವಾಗ್ದಾಳಿ ನಡೆಸಿತ್ತು. ಆದರೆ ಅಧಿಕಾರಕ್ಕೆ ಬಂದೊಡನೆ ರಾಜ್ಯದ ಜನತೆಗೆ ಬೆಲೆ ಏರಿಕೆಯ ಸರಣಿ ಶಾಕ್ ನೀಡುತ್ತಿದೆ. ಅನ್ನಭಾಗ್ಯದ ಹಣವನ್ನು ಹಾಲು ಮತ್ತು ಆಲ್ಕೋಹಾಲಿನಿಂದಲೇ ವಸೂಲಿ ಮಾಡಲು ಇಳಿದಿರುವ ಕಾಂಗ್ರೆಸ್​​ ಸರ್ಕಾರದ ಕ್ಷುದ್ರ ವಿತ್ತನೀತಿಗೆ ಧಿಕ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ.

ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರಕಾರ, ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುವ ಜ್ಯೋತಿಯಾಗಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರಕಾರ, ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ ಎಂದು ವ್ಯಂಗ್ಯವಾಡಿದ್ದಾರೆ.

ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದ ಕಾಂಗ್ರೇಸ್​​ನವರು ಎರಡೇ ತಿಂಗಳಲ್ಲಿ ಅದನ್ನು ಮರೆತು ಹೋಗಿದ್ದಾರೆ. ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಯ ಬಗ್ಗೆ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net