More

    ಡಿಪ್ಲೊಮಾ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

    ಅರಸೀಕೆರೆ: ನಗರದ ಹೊರವಲಯದಲ್ಲಿರುವ ರೇಷ್ಮೆ ವಿಸ್ತರಣಾ ಕೇಂದ್ರದ ಆವರಣದಲ್ಲಿ ನೂತನ ಡಿಪ್ಲೊಮಾ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಬುಧವಾರ ಮಧ್ಯಾಹ್ನ ಶಂಕುಸ್ಥಾಪನೆ ನೆರವೇರಿಸಿದರು.

    ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡರ ಒತ್ತಾಸೆಯಂತೆ ತಾಲೂಕಿಗೆ ನೂತನ ಪಾಲಿಟೆಕ್ನಿಕ್ ಕಾಲೇಜು ಮಂಜೂರು ಮಾಡಿದ್ದು, ನಗರ ಹಾಗೂ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಜತೆಗೆ 2018ರಲ್ಲಿ ಇಂಜಿನಿಯರಿಂಗ್ ಕಾಲೇಜು ಅರಂಭಕ್ಕೂ ಹಸಿರು ನಿಶಾನೆ ತೋರಿದ್ದು, ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ ಎಂದರು.

    ಎಐಸಿಟಿ ಅನುಮತಿ ಪಡೆದು ಮುಂಬರುವ ಶೈಕ್ಷಣಿಕ ವರ್ಷದಿಂದ ಹೊಸ ಹೊಸ ಕೋರ್ಸ್ ಆರಂಭಿಸಲು ಚಿಂತನೆ ನಡೆಸಲಾಗಿದೆ. ಕೆಲವರು ಉದ್ದೇಶಪೂರ್ವಕವಾಗಿ ಕಾಲೇಜು ಆರಂಭಿಸಲು ಅಡ್ಡಿಪಡಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದು, ಯಾವುದಕ್ಕೂ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ. ತ್ವರಿತಗತಿಯಲ್ಲಿ ಕೆಲಸ ಪೂರ್ಣಗೊಳಿಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಚಿವರು ಹೇಳಿದರು.

    ಶಾಸಕ ಕೆ.ಎಂ.ಶಿವಲಿಂಗೇಗೌಡ ಮಾತನಾಡಿ, ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ ಸೇರಿ ಎಲ್ಲ ಬಗೆಯ ಮೂಲಸೌಕರ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜಕೀಯ ವಿರೋಧಿಗಳ ಟೀಕೆ, ಟಿಪ್ಪಣಿ ನಡುವೆಯೂ ಉತ್ತಮ ಕೆಲಸ ಮಾಡುತ್ತಿದ್ದು, ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುತ್ತಿದ್ದೇವೆ. ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಮಂಜೂರಾದ ದಿನದಿಂದ ಅನಗತ್ಯ ತೊಂದರೆ ನೀಡಲಾಗುತ್ತಿದೆ. ಪ್ರಕರಣವನ್ನು ಸುಪ್ರೀಂ ಕೋರ್ಟ್‌ವರೆಗೆ ಕೊಂಡೊಯ್ದಿರುವುದು ಎಷ್ಟರಮಟ್ಟಿಗೆ ಸರಿ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

    ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಕೆ.ಎಂ.ಸುರೇಶ್, ಜಾಜೂರು ಗ್ರಾಪಂ ಅಧ್ಯಕ್ಷೆ ವೀಣಾ ಉಮೇಶ್, ಉಪಾಧ್ಯಕ್ಷ ಸ್ವಾಮಿ, ಬೆಂಗಳೂರಿನ ರೈಟ್ಸ್ ಸಂಸ್ಥೆಯ ಹೆಚ್ಚುವರಿ ಪ್ರಧಾನ ವ್ಯವಸ್ಥಾಕ ರಣಧೀರ್ ರೆಡ್ಡಿ, ಹೆಚ್ಚುವರಿ ವ್ಯವಸ್ಥಾಪಕಿ ರೇಖಾ ಅಹಮದ್, ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್, ತಾಪಂ ಇಒ ನಾಗರಾಜ್ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿದ್ದರು.

    ಶಂಕುಸ್ಥಾಪನೆ ನಂತರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕುಂದುಕೊರತೆ ಹಾಗೂ ಇಂಜಿನಿಯರಿಂಗ್ ಕಾಲೇಜು ಕಟ್ಟಡ ಕಾಮಗಾರಿ ಪ್ರಗತಿಯನ್ನು ಸಚಿವರು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರು ಸಚಿವರಿಗೆ ಸಾಥ್ ನೀಡಿದರು.

    ರಾಜ್ಯೋತ್ಸವ ರಸಪ್ರಶ್ನೆ - 23

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts