ಉಚಿತ ಬಸ್‌ಪಾಸ್‌ಗೆ ಆಗ್ರಹಿಸಿ ಪ್ರತಿಭಟನೆ

ವಿಜಯಪುರ: ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವಿತರಿಸುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಸಿದ್ಧೇಶ್ವರ ದೇವಾಲಯದಿಂದ ಜಿಲ್ಲಾಕಾರಿ ಕಚೇರಿವರೆಗೆ ಪ್ರತಿಭಟನಾ ರ‌್ಯಾಲಿ ನಡೆಸಿದ ವಿದ್ಯಾರ್ಥಿಗಳು ಅಪರ ಜಿಲ್ಲಾಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯ ಪೃಥ್ವಿಕುಮಾರ ಮಾತನಾಡಿ, ರಾಜ್ಯ ಸರ್ಕಾರ 2018-19ನೇ ಸಾಲಿನ ಬಜೆಟ್‌ನಲ್ಲಿ ಎಸ್‌ಸಿ/ಎಸ್‌ಟಿ ಸೇರಿದಂತೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಣೆ ಮಾಡಿತ್ತು. ಆದರೆ, ಅದು ಇಲ್ಲಿವರೆಗೆ ಜಾರಿಗೆ ಬಂದಿಲ್ಲ. ಸರ್ಕಾರ ಕೂಡಲೇ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ದೊರಕಿಸಿಕೊಡಬೇಕೆಂದು ಆಗ್ರಹಿಸಿದರು.
ಎಬಿವಿಪಿ ವಿಭಾಗ ಸಂಚಾಲಕ ಸಚಿನ್ ಕುಳಗೇರಿ ಮಾತನಾಡಿ, ರಾಜ್ಯವು ಬರ ಪರಿಸ್ಥಿತಿ ಎದುರಿಸುತ್ತಿದೆ. ಬಡ ರೈತ ಕುಟುಂಬಗಳು ಸಂಕಷ್ಟದಲ್ಲಿವೆ. ಇಂಥ ಪರಿಸ್ಥಿತಿಯಲ್ಲಿ ಸರ್ಕಾರ ಉಚಿತ ಬಸ್‌ಪಾಸ್ ನೀಡುವ ಮೂಲಕ ಬಡ ಹಾಗೂ ರೈತರ ಮಕ್ಕಳು ಸಹಾಯಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದರು.
ನಗರ ಕಾರ್ಯದರ್ಶಿ ಸಚಿನ್ ಬಾಗೇವಾಡಿ. ಪಾಂಡು ಮೋರೆ, ಮಣಿಕಂಠ ಹೀರೆಮಠ, ಶ್ರೀಧರ ಕಡಕೋಳ, ಅಮರ ಕಂಬಾರ, ವಿಠ್ಠಲ ಹಾಲಳ್ಳಿ, ಸೋಮನಾಥ ತೋಳನೂರ, ನಿರಂಜನ ಮಾಶ್ಯಾಳ ಇತರರು ಇದ್ದರು.

Leave a Reply

Your email address will not be published. Required fields are marked *