More

    ಸ್ಮಾರ್ಟ್‌ಸಿಟಿಯಿಂದ ಉತ್ತಮ ಕೆಲಸ – ಬಿ.ಎಸ್. ಯಡಿಯೂರಪ್ಪ

    ಬೆಳಗಾವಿ: ಸ್ಮಾರ್ಟ್‌ಸಿಟಿಯಿಂದ ಉತ್ತಮ ಕೆಲಸವಿಶ್ವೇಶ್ವರಯ್ಯ ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಿಸಿರುವ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ (ಸಮಗ್ರ ಆಜ್ಞಾ ಮತ್ತು ನಿರ್ವಹಣಾ ಕೇಂದ್ರ) ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಉದ್ಘಾಟಿಸಿದರು.

    ಸ್ಮಾರ್ಟ್‌ಸಿಟಿ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ಪ್ರಾತ್ಯಕ್ಷಿಕೆ ಮೂಲಕ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್‌ನ ಕಾರ್ಯ ವೈಖರಿ ಬಗ್ಗೆ ವಿವರಿಸಿದರು. ಇದೇ ವೇಳೆ ಮಹಾನಗರ ಪಾಲಿಕೆ ವತಿಯಿಂದ ಅಶೋಕ್ ನಗರದಲ್ಲಿ ನಿರ್ಮಿಸಿರುವ ಈಜುಕೊಳ ಹಾಗೂ ವ್ಯಾಯಾಮ ಶಾಲೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಆಜಾದ್ ಭವನ (ಕಚೇರಿ ಸಂಕೀರ್ಣ), ಆಂಗ್ಲ ಮಾಧ್ಯಮ ಶಾಲೆ ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಸಿಎಂ, ಸ್ಮಾರ್ಟ್‌ಸಿಟಿಯಿಂದ ಉತ್ತಮ ಕೆಲಸಗಳಾಗಿವೆ. ಇನ್ನಷ್ಟು ಚುರುಕುಗೊಳಿಸಲು ಸೂಚನೆ ನೀಡಲಾಗಿದೆ. ಬೆಳಗಾವಿ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಆರ್ಥಿಕವಾಗಿ ರಾಜ್ಯದ ಪ್ರಮುಖ ನಗರವಾಗಿ ಬೆಳೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸಿರುವುದು ಶ್ಲಾಘನೀಯ. ಈ ಸೆಂಟರ್ ಮೂಲಕ ಸಂಚಾರ ದಟ್ಟಣೆ ನಿರ್ವಹಣೆಗೆ ವಿನೂತನ ಪ್ರಯತ್ನವಾಗಿದೆ. ಸ್ಮಾರ್ಟ್‌ಸಿಟಿ ಯೋಜನೆಯಡಿ ಗುಣಮಟ್ಟದ ಕಾಮಗಾರಿ ಮುಂದುವರಿಸುವಂತೆ ಸೂಚನೆ ನೀಡಲಾಗಿದೆ ಎಂದರು.

    ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಶಶಿಕಲಾ ಜೊಲ್ಲೆ, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಅನಿಲ್ ಬೆನಕೆ, ಅಭಯ ಪಾಟೀಲ, ದುರ್ಯೋಧನ ಐಹೊಳೆ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ, ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಇತರರಿದ್ದರು.

    ಜಿಪಂ ಅಧ್ಯಕ್ಷೆಗೆ ಅವಮಾನ: ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಜಿ.ಪಂ. ಅಧ್ಯಕ್ಷೆ ಆಶಾ ಐಹೊಳೆ ಅವರಿಗೆ ಅವಮಾನವಾದ ಘಟನೆ ಜರುಗಿದೆ. ಆಶಾ ಅವರಿಗೆ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಲಾಗಿತ್ತು. ಆದರೆ, ಅಲ್ಲಿ ಕುಳಿತುಕೊಳ್ಳಲು ಆಶಾ ಅವರಿಗೆ ಕುರ್ಚಿ ವ್ಯವಸ್ಥೆ ಮಾಡಿರಲಿಲ್ಲ. ಇದರಿಂದ ಕುಪಿತಗೊಂಡ ಆಶಾ ಅವರು ಕಾರ್ಯಕ್ರಮದಿಂದ ಹೊರ ನಡೆದರು. ಪೊಲೀಸರೂ ಅವರಿಗೆ ಐಡಿ ಕಾರ್ಡ್ ಕೇಳಿ ಕಿರಿಕಿರಿಯುಂಟು ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts