More

    ಇಂದು ದಕ್ಷಿಣ ಕನ್ನಡ ಸಂಪೂರ್ಣ ಬಂದ್

    ಮಂಗಳೂರು: ಕರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾ.28ರಂದು ಎಲ್ಲ ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತ ಮಾಡಲು ನಿರ್ಧರಿಸಲಾಗಿದೆ. ಬೆಳಗ್ಗೆ 6ರಿಂದ 12ರವರೆಗೆ ಅಗತ್ಯ ವಸ್ತುಗಳಿಗೆ ನೀಡಲಾಗಿದ್ದ ಅವಕಾಶವನ್ನು ಹಿಂಪಡೆಯಲಾಗಿದ್ದು, ಹಾಲು, ಪೇಪರ್, ಮೆಡಿಕಲ್ ಮತ್ತಿತರ ತುರ್ತು ಅವಶ್ಯಕತೆಗಳಿಗೆ ಮಾತ್ರ ವಿನಾಯಿತಿ ಇದೆ.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 7 ಪ್ರಕರಣಗಳು ದೃಢಪಟ್ಟಿವೆ. ನೆರೆಯ ಕಾಸರಗೋಡು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಕರೊನಾ ಪಾಸಿಟಿವ್ ಪ್ರಕರಣಗಳು ಏರಿಕೆಯಾಗುತ್ತಿವೆ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂಧ ಮಾಡದಿದ್ದರೆ ಮುಂದಿನ ದಿನಗಳು ಇನ್ನಷ್ಟು ಅಪಾಯಕಾರಿಯಾಗಲಿವೆ.

    ಜನರ ಉತ್ತಮ ಭವಿಷ್ಯಕ್ಕಾಗಿ ಕೈಗೊಳ್ಳುವ ಈ ನಿಧಾರವನ್ನು ಎಲ್ಲರೂ ಬೆಂಬಲಿಸಬೇಕು. ಸಾರ್ವಜನಿಕರ ಆರೋಗ್ಯ ಸುರಕ್ಷತೆಯ ಉದ್ದೇಶದಿಂದ ಈ ನಿರ್ಧಾರವನ್ನು ಅನಿವಾರ್ಯವಾಗಿ ತೆಗೆದುಕೊಳ್ಳಬೇಕಾಗಿದೆ. ಪ್ರತಿಯೊಬ್ಬರೂ ಮನೆಯೊಳಗೆ ಕುಳಿತು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪ್ರಧಾನಿ, ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಎಲ್ಲ ವಾಣಿಜ್ಯ ವ್ಯವಹಾರ ಬಂದ್ ಮಾಡಲು ನಿರ್ಧರಿಸಲಾಗಿದೆ. ಶನಿವಾರದ ಸ್ಥಿತಿಗತಿ ಪರಾಮರ್ಶಿಸಿ ಬಂದ್ ಮುಂದುವರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

    ಸಂಸದ ನಳಿನ್ ಕುಮಾರ್ ಕಟೀಲ್, ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮೇಯರ್ ದಿವಾಕರ ಪಾಂಡೇಶ್ವರ, ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ರಾಜೇಶ್ ನಾಯ್ಕ, ಹರೀಶ್ ಪೂಂಜಾ, ಯು.ಟಿ.ಖಾದರ್, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಮೊದಲಾದವರು ಉಪಸ್ಥಿತರಿದ್ದರು.

    ರಸ್ತೆಗಿಳಿಯದಂತೆ ಸೂಚನೆ: ಕಾಸರಗೋಡಿನಲ್ಲಿ ಅತಿ ಹೆಚ್ಚು ಕರೊನಾ ಪಾಸಿಟಿವ್ ಪ್ರಕರಣ ದಾಖಲಾಗಿರುವುದು ಮತ್ತು ದ.ಕ. ಜಿಲ್ಲೆಯಲ್ಲಿ 2 ಪ್ರಕರಣ ಶುಕ್ರವಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್‌ಡೌನ್‌ಗೆ ನಿರ್ಧರಿಸಲಾಗಿದೆ. ಶನಿವಾರ ಬೆಳಗ್ಗೆ 6 ಗಂಟೆಯಿಂದಲೇ ಔಷಧ ಅಥವಾ ಅನಾರೋಗ್ಯ ಪೀಡಿತರನ್ನು ಹೊರತುಪಡಿಸಿ ಯಾರೂ ಮನೆಯಿಂದ ಹೊರಗೆ ಬರುವಂತಿಲ್ಲ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts