ಬೆಳಗಾವಿ: ಮಾಧ್ಯಮ ಪ್ರತಿನಿಧಿಗಳ ಬಹುದಿನಗಳ ಆಶಯದಂತೆ ಬೆಳಗಾವಿಯಲ್ಲಿ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ವಿಶ್ವೇಶ್ವರಯ್ಯ ನಗರದಲ್ಲಿ ಶುಕ್ರವಾರ ಪತ್ರಿಕಾಭವನ ಹಾಗೂ ತೋಟಗಾರಿಕೆ ಇಲಾಖೆ ಕಚೇರಿ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನ ಒದಗಿಸುವ ಮೂಲಕ ಅನೇಕ ದಿನಗಳ ಬೇಡಿಕೆ ಈಡೇರಿಸಲಾಗಿದೆ. ಅದೇ ರೀತಿ ಅಗತ್ಯ ಅನುದಾನ ಒದಗಿಸುವ ಮೂಲಕ ಸುಸಜ್ಜಿತ ಪತ್ರಿಕಾ ನಿರ್ಮಾಣ ಮಾಡಲಾಗುವುದು. ಇದೇ ಸ್ಥಳದಲ್ಲಿ ತೋಟಗಾರಿಕೆ ಇಲಾಖೆಯ ಕಟ್ಟಡ ನಿರ್ಮಾಣ ಮಾಡುವುದರ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲಾಗುವುದು. ಉತ್ತಮ ಕಟ್ಟಡ ನಿರ್ಮಿಸುವುದರಿಂದ ಎರಡನೇ ರಾಜಧಾನಿ ಬೆಳಗಾವಿಯನ್ನು ಅಭಿವೃದ್ಧಿಪಡಿಸಲು ಅನುಕೂಲವಾಗಲಿದೆ ಎಂದರು.
ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾತನಾಡಿ, ಬೆಳಗಾವಿಯಲ್ಲಿ ಸಾರ್ವಜನಿಕರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಉತ್ತಮ ಕಟ್ಟಡ ನಿರ್ಮಾಣ ಮಾಡುತ್ತಿರುವುದು ಸಂತಸದ ಸಂಗತಿ. ಇದರಿಂದ ಬೆಳಗಾವಿ ಅಭಿವೃದ್ಧಿ ಪಥದತ್ತ ಸಾಗಲಿದೆ. ಪತ್ರಿಕಾ ಭವನ ಹಾಗೂ ತೋಟಗಾರಿಕೆ ಇಲಾಖೆ ಕಚೇರಿ ಕಟ್ಟಡಗಳು ಸುಸಜ್ಜಿತ ಕಟ್ಟಡಗಳಾಗುವ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವಂತಾಗಲಿ ಎಂದು ತಿಳಿಸಿದರು.
ಶಾಸಕರಾದ ಆಸೀಫ್ ಸೇಠ್, ಬಾಬಾಸಾಹೇಬ್ ಪಾಟೀಲ, ವಿಶ್ವಾಸ ವೈದ್ಯ, ಮೇಯರ್ ಸವಿತಾ ಕಾಂಬಳೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಪಂ ಸಿಇಒ ರಾಹುಲ ಶಿಂಧೆ, ಎಸ್‌ಪಿ ಡಾ.ಭೀಮಾಶಂಕರ ಗುಳೇದ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪ ನಿರ್ದೇಶಕ ಗುರುನಾಥ ಕಡಬೂರ, ಮುಖಂಡ ಸರ್ವೋತ್ತಮ ಜಾರಕಿಹೊಳಿ ಇತರರಿದ್ದರು.