More

    ಹವಾಮಾನ, ಮಳೆ-ಬೆಳೆ: ಜಿಲ್ಲಾಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ, ಸೇತುವೆಗಳ ಮುಳುಗಡೆ: ಶಾಶ್ವತ ಪರ್ಯಾಯ ಮಾರ್ಗ ನಿರ್ಮಾಣ ಸಾಧ್ಯತೆ ಪರಿಶೀಲಿಸಲು ಸಿಎಂ ಸೂಚನೆ.

    ಗದಗ: ಜಿಲ್ಲೆಗಳಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಕೆಳಹಂತದ ಸೇತುವೆಗಳು ಮುಳುಗಡೆಯಾಗುತ್ತವೆ. ಆದ್ದರಿಂದ ಜನರಿಗೆ ಅನುಕೂಲವಾಗುವಂತೆ ಶಾಶ್ವತ ಪರ್ಯಾಯ ಮಾರ್ಗ ನಿರ್ಮಾಣದ ಸಾಧ್ಯತೆಗಳನ್ನು ಪರಿಶೀಲಿಸಿ ವರದಿ ಕಳಿಸುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

    ರಾಜ್ಯದ ಹವಾಮಾನ ಮತ್ತು ಮಳೆ-ಬೆಳೆಗಳಿಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಬುಧವಾರ (ಜು.26) ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.

    ಪ್ರತಿವರ್ಷ ಕೆಳಹಂತದ ಸೇತುವೆಗಳು ಮುಳುಗಡೆಯಾಗುವುದರಿಂದ ಶಾಶ್ವತ ಪರ್ಯಾಯ ಮಾರ್ಗ ನಿರ್ಮಿಸುವುದು ಸೂಕ್ತವಾಗಿದೆ. ಆದ್ದರಿಂದ ಈ ಕುರಿತು ಪರಿಶೀಲಿಸಿ ವಿಸ್ತೃತವಾದ ವರದಿ ಕಳಿಸಬೇಕು. ಇದನ್ನು ಸರಕಾರದ ಹಂತದಲ್ಲಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

    ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಭೀಮಾ ಸೇರಿದಂತೆ ಪ್ರಮುಖ ನದಿಗಳ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು. ಅತಿವೃಷ್ಟಿ ಮತ್ತು ಪ್ರವಾಹ ಸಂದರ್ಭಗಳಲ್ಲಿ ಮಾನವ ಜೀವಹಾನಿ ತಡೆಗಟ್ಟಲು ರಾಜ್ಯದ ಎಲ್ಲ ಜಿಲ್ಲೆಗಳ ಅಧಿಕಾರಿಗಳು ತಕ್ಷಣವೇ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅಪಾಯದಮಟ್ಟ ಮೀರಿ ಹರಿಯುವ ನದಿಗಳು ಮತ್ತು ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ಅವುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಇದಲ್ಲದೇ ಅಪಾಯಕಾರಿ ಸ್ಥಳಗಳಿಗೆ ತೆರಳದಂತೆ ನಿರ್ಬಂಧ ವಿಧಿಸಬಹುದು ಎಂದರು.

    ಕಂದಾಯ, ಗ್ರಾಮೀಣಾಭಿವೃದ್ಧಿ, ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕೆಲಸ ಮಾಡುವ ಮೂಲಕ ಮಾನವ ಜೀವಹಾನಿ ಕಡಿಮೆಗೊಳಿಸುವುದು ಸಾಧ್ಯವಾಗಲಿದೆ. ಪ್ರತಿವರ್ಷ ಮುಳುಗಡೆಯಾಗುವ ನದಿತೀರದ ಗ್ರಾಮಗಳ ಶಾಶ್ವತ ಸ್ಥಳಾಂತರಕ್ಕೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    ಕಟ್ಟಡಗಳ ದುರಸ್ತಿಗೆ ಕಟ್ಟುನಿಟ್ಟಿನ ಸೂಚನೆ:

    ಜಿಲ್ಲಾ-ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಶಾಲೆಗಳು, ಅಂಗನವಾಡಿ ಕೇಂದ್ರಗಳು, ವಸತಿನಿಲಯಗಳು ಸೇರಿದಂತೆ ಸರಕಾರಿ ಕಟ್ಟಡಗಳನ್ನು ಪರಿಶೀಲಿಸಿ ಅಗತ್ಯವಿರುವ ಕಡೆಗಳಲ್ಲಿ ಕೂಡಲೇ ದುರಸ್ತಿ ಮಾಡಲು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಏನಾದರೂ ಸಮಸ್ಯೆಯಾದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

    ರಾಜ್ಯ ವಿಪತ್ತು ನಿರ್ವಹಣಾ ಅನುದಾನದಡಿ ಕಟ್ಟಡಗಳ ದುರಸ್ತಿಗೆ ಅವಕಾಶವಿದ್ದು, ಈ ಅನುದಾನ ಬಳಸಿಕೊಂಡು ತಕ್ಷಣವೇ ದುರಸ್ತಿಗೊಳಿಸಬೇಕು ಎಂದು ಕಂದಾಯ ಇಲಾಖೆಯ ಸಚಿವರಾದ ಕೃಷ್ಣ ಭೈರೇಗೌಡ ತಿಳಿಸಿದರು. ಎಸ್.ಡಿ.ಆರ್.ಎಫ್ ಹಾಗೂ ಎನ್.ಡಿ.ಆರ್.ಎಫ್. ಕೈಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದರು.

    ಪ್ರವಾಹ ಸಂದರ್ಭದಲ್ಲಿ ಮಾನವ ಜೀವಹಾನಿ, ಜಾನುವಾರುಗಳ ಜೀವಹಾನಿ, ಸಾರ್ವಜನಿಕರ ಆಸ್ತಿ ರಕ್ಷಣೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ನಿರ್ದೇಶನವನ್ನು ನೀಡಿದರು. ಕೆಲವೆಡೆ ಇನ್ನೂ ಬಿತ್ತನೆ ನಡೆಯಲಿರುವುದರಿಂದ ಅಗತ್ಯವಿರುವ ಬೀಜ, ಗೊಬ್ಬರವನ್ನು ಒದಗಿಸಬೇಕು ಎಂದು ತಿಳಿಸಿದರು.

    ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ಪ್ರತಿಯೊಬ್ಬ ಅಧಿಕಾರಿಗಳು ಕೇಂದ್ರ ಸ್ಥಾನಗಳಿಯೇ ಇರಬೇಕು ಎಂದು ಸೂಚನೆ ನೀಡಿದರು.

    ಗದಗ ಜಿಲ್ಲೆ: ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಮಾತನಾಡಿ ಅತೀಯಾದ ಮಳೆಯಿಂದಾಗಿ ಮನೆ ಕುಸಿತಗಳಾಗುವ ಸಾಧ್ಯತೆಗಳಿದ್ದು ಶೀಥಿಲಾವಸ್ಥೆಯಲ್ಲಿರುವ ಮನೆಗಳಲ್ಲಿ ವಾಸಿಸುವವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು. ಪ್ರವಾಹ ಉಂಟಾಗಬಹುದಾದ ಗ್ರಾಮಗಳಲ್ಲಿ ಮುಂಜಾಗೃತಾ ಕ್ರಮಗಳನ್ನು ಜಿಲ್ಲಾಡಳಿತದಿಂದ ಕೈಗೊಳ್ಳಬೇಕು ಎಂದರು. ರೈತರ ಆತ್ಮ ಹತ್ಯೆ ಪ್ರಕರಣಗಳಲ್ಲಿ ಹೆಚ್ಚಾಗಿ ಖಾಸಗಿ ಲೇವಾದೇವಿಗಾರರ ಕಿರುಕಳ ಮುಖ್ಯ ಕಾರಣವಾಗಿದ್ದು ಅದಕ್ಕೇ ಕಡಿವಾಣ ಹಾಕುವ ಅಗತ್ಯವಿದೆ. ಗ್ರಾಮ ಪಂಚಾಯತ ಮಟ್ಟದಲ್ಲಿ ಆತ್ಮ ಹತ್ಯೆ ಮಾಡಿಕೊಳ್ಳಬಹುದಾದ ವ್ಯಕ್ತಿಗಳ ಕುರಿತು ಮಾಹಿತಿ ದೊರೆತಲ್ಲಿ ಸ್ಥಳೀಯವಾಗಿ ಕ್ರಮ ವಹಿಸಲು ಅವಕಾಶ ನೀಡಬೇಕು ಎಂದರು. ಇದಕ್ಕೆ ಪ್ರತಿಯಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಜಿಲ್ಲಾಧಿಕಾರಿಗಳು ಆತ್ಮ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಲ ವಸೂಲಾತಿಯಲ್ಲಿ ಕಿರುಕಳ ಆಗದಂತೆ ಶಿಸ್ತು ಕ್ರಮ ವಹಿಸಬೇಕು. ಪೋಲಿಸ ಇಲಾಖೆಯಿಂದಲೂ ಈ ಕುರಿತು ಸೂಕ್ತ ಕ್ರಮಗಳನ್ನು ಅನುಸರಿಸುವಂತೆ ತಿಳಿಸಿದರು.

    ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.ಅವರು ಮಾತನಾಡಿ ಜಿಲ್ಲೆಯ ಅತೀವೃಷ್ಠಿ ಹಾಗೂ ಪ್ರವಾಹ ಪರಿಸ್ಥಿತಿ ಕುರಿತು ವಿವರವಾದ ಮಾಹಿತಿಯನ್ನು ಹಾಗೂ ಕೈಗೊಂಡ ಮುಂಜಾಗೃತಾ ಕ್ರಮಗಳ ಕುರಿತು ಸಭೆಗೆ ಮಾಹಿತಿ ಒದಗಿಸಿದರು.ಬಿ.ಎಸ್. ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ ಮತ್ತಿತರ ಇಲಾಖೆಗಳ ಅಧಿಕಾರಿಗಳು ವಿಡಿಯೋ ಸಂವಾದ ವೇಳೆ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts