ಉಡುಪಿಯಲ್ಲಿ ಲಿಂಗಾನುಪಾತ ಏರಿಕೆ

ಉಡುಪಿ: ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆಯಿಂದ ಸಮಾಜದಲ್ಲಿ ಲಿಂಗಾನುಪಾತದ ಅಂತರ ಹೆಚ್ಚಾಗಲಿದೆ. 2011ರಲ್ಲಿ ಭಾರತದಲ್ಲಿ 1000 ಪುರುಷರಿಗೆ 940 ಮಹಿಳಾ ಲಿಂಗಾನುಪಾತ ಇದ್ದು, ಉಡುಪಿ ಜಿಲ್ಲೆಯಲ್ಲಿ 958 ಇತ್ತು. ಕಳೆದ ವರ್ಷ ಜಿಲ್ಲೆಯಲ್ಲಿ ಲಿಂಗಾನುಪಾತ 940 ಇದ್ದು, ಈ ಬಾರಿ 977ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಕ್ಷಮ ಪ್ರಾಧಿಕಾರ ಪಿ.ಸಿ. ಪಿ.ಎನ್.ಡಿ.ಟಿ. ಸಂಯುಕ್ತ ಆಶ್ರಯದಲ್ಲಿ ಡಿಎಚ್‌ಒ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾದ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಲಿಂಗಾನುಪಾತದಲ್ಲಿ ಉಡುಪಿ ಜಿಲ್ಲೆ ರೆಡ್ ಝೋನ್‌ನಲ್ಲಿ ಇಲ್ಲದಿದ್ದರೂ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಯಾವುದೇ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಭ್ರೂಣಲಿಂಗ ಪತ್ತೆ ಬಗ್ಗೆ ಪ್ರಚೋದಿಸುವ ಜಾಹೀರಾತು, ದೇವರ ಫೋಟೊ ಹಾಕಿ ಪರೋಕ್ಷವಾಗಿ ಭ್ರೂಣದ ಕುರಿತು ಮಾಹಿತಿ ನೀಡುವುದು ಶಿಕ್ಷಾರ್ಹ. ಜತೆಗೆ ಗಂಡು ಮಗುವಾಗುತ್ತದೆ ಎಂದು ಜ್ಯೋತಿಷ್ಯ ಹೇಳುವುದು, ಧಾರ್ಮಿಕ ಕಾರ್ಯ ನಡೆಸಿದರೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಉದ್ಘಾಟಿಸಿದರು. ಪ್ರಸೂತಿ ತಜ್ಞರು ಹಾಗೂ ಪಿ.ಸಿ ಪಿ.ಎನ್.ಡಿ.ಟಿಯ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಡಾ.ಪ್ರತಾಪ್ ಕುಮಾರ್ ಹಾಗೂ ಸ್ತ್ರೀ ರೋಗತಜ್ಞೆ ಡಾ.ಶುಭಗೀತಾ ಮಾತನಾಡಿದರು.

ಉಡುಪಿ ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್ ಜಿಲ್ಲೆಯಲ್ಲಿ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಕಾಯಿದೆ ಕುರಿತ ಕರಪತ್ರ ಬಿಡುಗಡೆ ಮಾಡಿದರು. ಅಜ್ಜರಕಾಡುವಿನ ಡಾ.ಜಿ.ಶಂಕರ್ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ರಾಜೇಂದ್ರ ಕೆ. ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ ಉಪಸ್ಥಿತರಿದ್ದರು. ತಾಲೂಕು ಆರೋಗ್ಯಾಧಿಕಾರಿ ಡಾ. ನಾಗರತ್ನ ಸ್ವಾಗತಿಸಿದರು. ಮಂಜುನಾಥ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಜಿಲ್ಲೆಯಲ್ಲಿ ಹೆಣ್ಣು ಮಕ್ಕಳಿಗೆ ಹೆಚ್ಚಿನ ರಕ್ಷಣೆ ಇದ್ದು, ಮಹಿಳಾಭಿವೃದ್ಧಿಯಲ್ಲಿ ಮಾದರಿಯಾಗಿದೆ. ಜಾಗೃತಿ ಕಾರ್ಯಕ್ರಮಗಳು ಹೆಚ್ಚು ನಡೆಯುತ್ತಿರುವ ಕಾರಣ ಜಿಲ್ಲೆಯಲ್ಲಿ ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಪ್ರಕರಣ ಕಡಿಮೆಯಾಗಿದೆ.
– ದಿನಕರ ಬಾಬು, ಜಿಲ್ಲಾ ಪಂಚಾಯಿತಿ ಅಧ್ಯಕ್ಷ