More

    ಮಹಾಶಿವರಾತ್ರಿ, ಯುಗಾದಿ ಜಾತ್ರೋತ್ಸವಕ್ಕೆ ಸಿದ್ಧತೆ ಕೈಗೊಳ್ಳಿ


    ಹನೂರು: ಮಹದೇಶ್ವರ ಬೆಟ್ಟದಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ಮಹಾಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವ ಸಂಬಂಧ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಕೆ. ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

    ತಾಲೂಕಿನ ಮಲೆಮಹದೇಶ್ವರ ಬೆಟ್ಟದ ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ ಸಂಜೆ ಮಹಾಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವ ಸಂಬಂಧ ಅಗತ್ಯ ಸಿದ್ಧತೆ ಕುರಿತು ಆಯೋಜಿಸಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಭಕ್ತರು ಕಾಲ್ನಡಿಗೆ ಮೂಲಕ ಮ.ಬೆಟ್ಟಕ್ಕೆ ಆಗಮಿಸುತ್ತಾರೆ. ಹಾಗಾಗಿ, ತಾಳುಬೆಟ್ಟದಿಂದ ಮ.ಬೆಟ್ಟದವರೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪ್ಲಾಸ್ಟಿಕ್ ನಿಷೇಧ ಬಗ್ಗೆ ಭಕ್ತರಲ್ಲಿ ಅರಿವು ಮೂಡಿಸುವುದರ ಜತೆಗೆ, ತಾಳುಬೆಟ್ಟದಲ್ಲಿ ಈ ಸಂಬಂಧ ಪರಿಶೀಲಿಸಬೇಕು. ದಾನಿಗಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು. ತಾಳುಬೆಟ್ಟ ಹಾಗೂ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ತಪಾಸಣಾ ಕೇಂದ್ರ ತೆರೆದು ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ಮ.ಬೆಟ್ಟದಲ್ಲೂ ತಪಾಸಣೆ ನಡೆಸಬೇಕು. ಜಾತ್ರಾ ಮಹೋತ್ಸವದ ಬಗ್ಗೆ ಬ್ಯಾನರ್‌ಗಳನ್ನು ಅಳವಡಿಸಿ ಪ್ರಚಾರ ಮಾಡಬೇಕು. ಕುಡಿಯುವ ನೀರು, ಶೌಚಗೃಹ, ದಾಸೋಹ, ನೆರಳಿನ ವ್ಯವಸ್ಥೆ ಸೇರಿದಂತೆ ಆಗಮಿಸುವ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು. ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
    ಸಮರ್ಪಕ ವಿದ್ಯುತ್, ಬಸ್ ಸೌಕರ್ಯ, ಸೂಕ್ತ ರೀತಿಯಲ್ಲಿ ಭಕ್ತರಿಗೆ ದೇವರ ದರ್ಶನ, ಪಾರ್ಕಿಂಗ್ ವ್ಯವಸ್ಥೆ, ಸೂಕ್ತ ಪೊಲೀಸ್ ಬಂದೋಬಸ್ತ್ ಹಾಗೂ ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು.

    ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶಾಸಕ ಎಂ.ಆರ್. ಮಂಜುನಾಥ್, ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್, ಜಿಪಂ ಸಿಇಒ ಆನಂದ್ ಪ್ರಕಾಶ್ ಮೀನಾ, ಡಿಸಿಎಫ್ ಡಾ.ಸಂತೋಷ್ ಕುಮಾರ್, ಕೊಳ್ಳೇಗಾಲ ತಹಸೀಲ್ದಾರ್ ಮಂಜುಳಾ, ಡಿವೈಎಸ್ಪಿ ಧರ್ಮೇಂದ್ರ, ಪಿಡಬ್ಲುೃಡಿ ಇಇ ಮಹೇಶ್, ಎಇಇ ಚಿನ್ನಣ್ಣ, ಸೆಸ್ಕ್ ಎಇಇ ಶಂಕರ್, ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಬೇಡಗಂಪಣ ಅರ್ಚಕ ಕೆ.ವಿ ಮಾದೇಶ್ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts