More

    ಲಸಿಕೆ ಪಡೆದು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

    ಧಾರವಾಡ: ವೈದ್ಯಕೀಯ ಕ್ಷೇತ್ರದ ತಜ್ಞರು ಅಭಿಪ್ರಾಯಪಟ್ಟಿರುವಂತೆ ಕೋವಿಡ್​ನ ಮೊದಲ ಅಲೆಗಿಂತಲೂ 2ನೇ ಅಲೆ ವೇಗವಾಗಿ ಹರಡುತ್ತಿದೆ. ಸಾರ್ವಜನಿಕರು ಕೋವಿಡ್ ಹರಡುವಿಕೆಯನ್ನು ನಿರ್ಲಕ್ಷಿಸಿಬಾರದು. ಸರ್ಕಾರ ಸೂಚಿಸುವ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ನಿರ್ಲಕ್ಷ್ಯ ಸಲ್ಲದು. 45 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಂಡು ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು ಎಂದು ಬೃಹತ್ ಮಧ್ಯಮ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ಕೋವಿಡ್ ನಿಯಂತ್ರಣ ಕ್ರಮಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    2020ರ ಮಾರ್ಚ್- ಏಪ್ರಿಲ್​ನಲ್ಲಿ ಕರೊನಾದ ಆರಂಭದಲ್ಲಿ ಪ್ರಕರಣಗಳು ಕಾಣಿಸಿಕೊಂಡಾಗ ಸಾರ್ವಜನಿಕರು ವಹಿಸಿದ ಮುನ್ನೆಚ್ಚರಿಕೆ ಮಾದರಿಯಲ್ಲಿಯೇ ಈಗಲೂ ಮುಂದುವರಿಯಬೇಕು. ಕರೊನಾ ವೈರಾಣುವನ್ನು ನಿರ್ಲಕ್ಷಿಸಬಾರದು. ತಜ್ಞರು ಅಭಿಪ್ರಾಯಪಟ್ಟಿರುವಂತೆ ಕೋವಿಡ್ ಮೊದಲ ಅಲೆಗಿಂತಲೂ 2ನೇ ಅಲೆ ಹೆಚ್ಚು ಅಪಾಯಕಾರಿಯಾಗಿದೆ. ಇದರ ನಿಯಂತ್ರಣಕ್ಕೆ ಸರ್ಕಾರ ಈಗಾಗಲೇ ಪೂರೈಸಿರುವ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆಗಳಲ್ಲಿ ಯಾವುದಾದರೊಂದನ್ನು 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು ಎಂದರು.

    ಕೋವಿಡ್ ತಪಾಸಣೆ ಮತ್ತು ಲಸಿಕೆ ಹಾಕಲು ಸರ್ಕಾರ ನಿಗದಿಪಡಿಸುವ ಗುರಿಯನ್ನು ಜಿಲ್ಲೆ ಸಾಧಿಸಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಮನೋಭಾವ ರೂಢಿಸಿಕೊಳ್ಳಬೇಕು. ಕಳೆದ ಒಂದು ತಿಂಗಳ ಅವಧಿಯಲ್ಲಿ ಕೋವಿಡ್ ಏರಿಕೆಯಾಗುತ್ತಿದೆ. ಜಿಲ್ಲಾಸ್ಪತ್ರೆ, ಕಿಮ್್ಸ ಸೇರಿದಂತೆ ಜಿಲ್ಲೆಯ ಪ್ರಮುಖ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಸಾಕಷ್ಟು ಹಾಸಿಗೆ ಹಾಗೂ ವೆಂಟಿಲೇಟರ್​ಗಳ ವ್ಯವಸ್ಥೆ ಸದಾ ಸಿದ್ಧವಿರಬೇಕು ಎಂದರು.

    ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಕಳೆದ ಮೂರು ವಾರಗಳಲ್ಲಿ ಕೋವಿಡ್ ವೇಗವಾಗಿ ಹರಡುತ್ತಿದೆ. ಸದ್ಯ ಜಿಲ್ಲೆಯಲ್ಲಿ 328 ಸಕ್ರಿಯ ಪ್ರಕರಣಗಳು ಇದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಸೋಂಕಿತರ ಸಂಪರ್ಕ ಪತ್ತೆ, ಆಸ್ಪತ್ರೆಗೆ ಸ್ಥಳಾಂತರಿಸಲು ಆಂಬುಲೆನ್ಸ್​ಗಳ ಏರ್ಪಾಡಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ತ್ವರಿತವಾಗಿ ಸ್ಪಂದಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಪ್ರತಿದಿನ 3,000 ಜನರನ್ನು ತಪಾಸಣೆ ಮಾಡಲು ಗುರಿ ನೀಡಲಾಗಿದೆ. ಸಂಚಾರಿ ಸ್ವಾಬ್ ಸಂಗ್ರಹಣೆಗೆ 17 ವಾಹನಗಳನ್ನು ನಿಯೋಜಿಸಲಾಗಿದೆ. ಇದುವರೆಗೆ 5,08,747 ಜನರನ್ನು ತಪಾಸಣೆಗೊಳಪಡಿಸಲಾಗಿದೆ. 22,979 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 22,028 ಜನ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ. 623 ಜನ ಮೃತಪಟ್ಟಿದ್ದಾರೆ. ಸದ್ಯ 328 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಮಾಸ್ಕ್ ಧರಿಸದ ವ್ಯಕ್ತಿಗಳಿಂದ ಇದುವರೆಗೆ 1,18,89,500 ರೂ. ದಂಡ ಸಂಗ್ರಹಿಸಲಾಗಿದೆ ಎಂದರು.

    ಕಿಮ್್ಸ ವೈದ್ಯಕೀಯ ಅಧೀಕ್ಷಕ ಡಾ. ಅರುಣಕುಮಾರ್ ಚೌಹಾಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಯಶವಂತ ಮದೀನಕರ, ಚಿಕಿತ್ಸೆಗೆ ಮಾಡಿಕೊಂಡಿರುವ ಸಿದ್ಧತೆಗಳನ್ನು ವಿವರಿಸಿದರು.

    ಪಾಲಿಕೆ ಆಯುಕ್ತ ಡಾ. ಸುರೇಶ ಇಟ್ನಾಳ, ಪೊಲೀಸ್ ಆಯುಕ್ತ ಲಾಬೂರಾಮ್ ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ಇಬ್ರಾಹಿಂ ಮೈಗೂರ, ಪ್ರಭಾರ ಅಪರ ಜಿಲ್ಲಾಧಿಕಾರಿ ರುದ್ರೇಶ, ಜಿಲ್ಲಾ ಆರ್​ಸಿಎಚ್ ಅಧಿಕಾರಿ ಡಾ. ಎಸ್.ಎಂ. ಹೊನಕೇರಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸುಜಾತಾ ಹಸವಿಮಠ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

    ಕೋವಿಡ್ 2 ಸಾವು

    ಕೋವಿಡ್ 2ನೇ ಅಲೆ ಪರಿಣಾಮವಾಗಿ ಜಿಲ್ಲೆಯಲ್ಲಿ 2 ಮರಣ ಪ್ರಕರಣಗಳು ವರದಿಯಾಗಿವೆ. ಧಾರವಾಡದ ಮದಾರಮಡ್ಡಿಯ 60 ವರ್ಷದ ಪುರುಷ, ಹುಬ್ಬಳ್ಳಿಯ ಕಿಮ್ಸ್​ನಲ್ಲಿ ಹಾಗೂ ಹುಬ್ಬಳ್ಳಿಯ ಗೋಕುಲ ರಸ್ತೆಯ ರಾಜಧಾನಿ ಕಾಲನಿಯ 76 ವರ್ಷದ ಪುರುಷ ಖಾಸಗಿ ಆಸ್ಪತ್ರೆಯಲ್ಲಿ ಮಾ. 28ರಂದು ಮೃತಪಟ್ಟಿದ್ದಾರೆ. ಜಿಲ್ಲೆಯ ಜನತೆ ಕೋವಿಡ್ ನಿರ್ಲಕ್ಷ್ಯ ಮಾಡದೆ ಲಸಿಕೆ ಹಾಕಿಸಿಕೊಳ್ಳಬೇಕು. ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಕಾಪಾಡಿಕೊಳ್ಳುವುದನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮನವಿ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts