More

    ಲೋಕಸಭೆ ಚುನಾವಣೆಗೆ ಸಜ್ಜಾಗಿ

    ಬಳ್ಳಾರಿ :ಲೋಕಸಭೆ ಚುನಾವಣೆಗೆ ಎಲ್ಲರೂ ಸಜ್ಜುಗೊಳ್ಳಬೇಕು. ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕಿದೆ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಹೇಳಿದರು.

    ನಗರದ ಸಂಗನಕಲ್ಲು ರಸ್ತೆಯಲ್ಲಿರುವ ವಾಜಪೇಯಿ ಬಡಾವಣೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಾಲಯದಲ್ಲಿ ಮಂಗಳವಾರ ನಡೆದ ಜಿಲ್ಲಾ ಕಾರ್ಯಕಾರಿ ಸಭೆಯಲ್ಲಿ ಅವರು ಮಾತನಾಡಿದರು.

    ಬೂತ್‌ಮಟ್ಟದಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಕಾರ್ಯಕರ್ತರು ತಮ್ಮ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಯಾರಿಗಾದರೂ ಟಿಕೆಟ್ ನೀಡಿದರೂ ಅಭ್ಯರ್ಥಿಗಿಂತ ಪಕ್ಷಕ್ಕೆ ಹೆಚ್ಚಿನ ಒತ್ತು ನೀಡಬೇಕು. ಹೈಕಮಾಂಡ್ ಸೂಚಿಸಿದ ಅಭ್ಯರ್ಥಿಯನ್ನು ಗೆಲ್ಲಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.

    ರಾಜ್ಯದಲ್ಲಿರುವ ಕಾಂಗ್ರೆಸ್ ಸುಳ್ಳಿನ ಸರ್ಕಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಅದಕ್ಕಾಗಿ ವಿವಿಧ ರೀತಿಯ ಕಾರ್ಯಕ್ರಮಗಳು, ರೂಪುರೇಷೆ ಬಗೆಗಿನ ಚರ್ಚೆಗಳನ್ನು ಕೈಗೊಳ್ಳಬೇಕು ಎಂದರು.

    ಎಂಎಲ್‌ಸಿ ವೈ.ಎಂ.ಸತೀಶ್‌ಮಾತನಾಡಿ, ಪಕ್ಷದಲ್ಲಿ ಯಾವುದೇ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಅದನ್ನು ಬಿಟ್ಟು ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕಿದೆ. ಎಲ್ಲರೂ ಒಗ್ಗಟ್ಟಾಗಿ ಪಕ್ಷಕ್ಕಾಗಿ ದುಡಿಯಬೇಕು. ಆಗ ಮಾತ್ರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂದು ತಿಳಿಸಿದರು.

    9ರಿಂದ ‘ಗ್ರಾಮಚಲೋ’ ಅಭಿಯಾನ
    ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಫೆ.9ರಿಂದ ಮೂರು ದಿನಗಳ ಕಾಲ ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಎಲ್ಲ ಹಳ್ಳಿಗಳಲ್ಲಿ ಗ್ರಾಮಚಲೋ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕ ತಿಳಿಸಿದರು.

    ಜಿಲ್ಲೆಯ ಪ್ರಮುಖ ನಾಯಕರು ಎಲ್ಲ ಗ್ರಾಮಗಳಲ್ಲಿ ವಾಸ್ತವ್ಯ ಮಾಡುವ ಮೂಲಕ ಜನರಲ್ಲಿ ತಿಳಿವಳಿಕೆ ನೀಡುವುದು, ಕೇಂದ್ರದ ಯೋಜನೆಗಳ ಬಗ್ಗೆ, ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು.

    ಬಿಜೆಪಿ ರಾಜ್ಯ ಉಪಾಧ್ಯಕ್ಷ ಡಾ.ಬಸವರಾಜ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಬಳ್ಳಾರಿ ವಿಭಾಗದ ಪ್ರಭಾರಿ ಚಂದ್ರಶೇಖರ ಪಾಟೀಲ ಹಲಗೇರಿ, ಸಹ ಪ್ರಭಾರಿ ವಿರೂಪಾಕ್ಷಪ್ಪ ಸಿಂಗಾನಹಾಳ್, ಮಾಜಿ ಶಾಸಕ ಜಿ.ಸೋಮಶೇಖರ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಶಂಕರ್ ರೆಡ್ಡಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಗೋನಾಳ್ ಮುರಹರಗೌಡ, ರಾಜ್ಯ ರೈತ ಮೋರ್ಚಾ ಮಾಜಿ ಪ್ರಧಾನ ಕಾರ್ಯದರ್ಶಿ ಗುರುಲಿಂಗನಗೌಡ, ಗುತ್ತಿಗನೂರು ವಿರೂಪಾಕ್ಷಪ್ಪ ಗೌಡ, ಎಚ್.ಹನುಮಂತಪ್ಪ, ಶಿವ ಕೃಷ್ಣ , ಇಬ್ರಾಹಿಂ ಬಾಬು, ಡಾ. ಮಹಿಪಲ್, ಮಾರುತಿ ಪ್ರಸಾದ್, ನೂರ್‌ಬಾಷ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts