More

    ಸೋಂಕಿತರಿಗೆ ಭರವಸೆದಾಯಕ ಚಿಕಿತ್ಸೆ ನೀಡಿ

    ಧಾರವಾಡ: ಸರ್ಕಾರ ಹಾಗೂ ಸಾರ್ವಜನಿಕ ಸ್ವಾಮ್ಯದ ಆಸ್ಪತ್ರೆಗಳು ಸಾಕಷ್ಟು ಸುಧಾರಣೆಯಾಗಿವೆ. ಕೋವಿಡ್ ಸಂದರ್ಭದಲ್ಲಿ ಹತ್ತಿರದ ಸಾರ್ವಜನಿಕ ಆಸ್ಪತ್ರೆಗಳಲ್ಲೇ ಸೋಂಕಿತರಿಗೆ ಭರವಸೆದಾಯಕ ಚಿಕಿತ್ಸೆ ದೊರೆಯಬೇಕು. ಸರ್ಕಾರ ಎಲ್ಲ ನೆರವು ನೀಡಲಿದೆ ಎಂದು ನೂತನ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಹೇಳಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕೋವಿಡ್-19 ನಿರ್ವಹಣೆ ಮತ್ತು ನಿಯಂತ್ರಣ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಪ್ರಮುಖ ವೈದ್ಯಕೀಯ ಸಂಸ್ಥೆ ಹುಬ್ಬಳ್ಳಿ ಕಿಮ್್ಸ ಜನಸಂಖ್ಯೆ ಮತ್ತು ಜನ ಸಾಂದ್ರತೆಗೆ ಅನುಗುಣವಾಗಿ ತನ್ನ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು ಎಂದರು.

    ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 5069 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಒಂದು ವಾರದಲ್ಲಿ 38,603 ಜನರನ್ನು ತಪಾಸಣೆಗೆ ಒಳಪಡಿಸಿದ್ದು, 7,882 ಜನರಿಗೆ ಸೋಂಕು ದೃಢಪಟ್ಟಿದೆ. ಶೇ.20.42ರಷ್ಟು ಪಾಸಿಟಿವಿಟಿ ದರ ದಾಖಲಾಗಿದೆ. ಸದ್ಯ ಜಿಲ್ಲೆಯಲ್ಲಿ ಕೋವಿಡ್ ಉತ್ತುಂಗ ಸ್ಥಿತಿಯಲ್ಲಿದೆ. ಇನ್ನೊಂದು ವಾರದಲ್ಲಿ ಕಡಿಮೆಯಾಗುವ ನಿರೀಕ್ಷೆ ಇದೆ. ತಪಾಸಣೆ, ಹೋಂ ಐಸೋಲೇಷನ್, ಕೋವಿಡ್ ಕೇರ್ ಸೆಂಟರ್ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಮರ್ಪಕವಾಗಿ ನಡೆಯುತ್ತಿವೆ ಎಂದರು.

    ಶಾಸಕ ಅಮೃತ ದೇಸಾಯಿ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಜಡಿ, ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಪೊಲೀಸ್ ಆಯುಕ್ತ ಲಾಭೂರಾಮ, ಎಸ್ಪಿ ಪಿ. ಕೃಷ್ಣಕಾಂತ, ಜಿಪಂ ಸಿಇಒ ಡಾ.ಬಿ.ಸುಶೀಲಾ, ಪಾಲಿಕೆ ಆಯುಕ್ತ ಡಾ. ಬಿ. ಗೋಪಾಲಕೃಷ್ಣ ಇತರರು ಇದ್ದರು.

    ಜಿಲ್ಲಾಡಳಿತದಿಂದ ಉತ್ತಮ ಕ್ರಮ

    ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾ ಆಡಳಿತ ನಿರಂತರ ಶ್ರಮಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಹೇಳಿದರು.

    ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ 3ನೇ ಅಲೆ ಆರಂಭದ ದಿನದಿಂದ ನಿತ್ಯ 5-6 ಸಾವಿರ ಜನರ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಸೋಂಕು ತಗುಲಿದವರಿಗೆ ಹೋಂ ಐಸೋಲೇಷನ್ ಮಾಡಲಾಗುತ್ತಿದೆ. ಕಿಮ್್ಸ ಹಾಗೂ ಇತರ ಆಸ್ಪತ್ರೆಗಳಲ್ಲಿ ಸೂಕ್ತ ಉಪಚಾರ ಒದಗಿಸಲಾಗುತ್ತಿದೆ ಎಂದರು.

    ಕರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉತ್ತಮ ಕಾರ್ಯ ನಡೆಸುತ್ತಿದ್ದಾರೆ. ಈ ಅವಧಿಯಲ್ಲಿ ಸರಿಯಾಗಿ ಕಾರ್ಯ ನಿರ್ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಧಿಕಾರಿಗಳು ಇಂತಹ ಕ್ರಮಕ್ಕೆ ಅವಕಾಶ ನೀಡದೆ ತಮ್ಮ ಜವಾಬ್ದಾರಿ ನಿಭಾಯಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts