More

    ರಾಜ್ಯ ಬಜೆಟ್​; 3 ಲಕ್ಷ ಮನೆಗಳ ನಿರ್ಮಾಣದ ಗುರಿ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಎಲ್ಲಾ ವಸತಿರಹಿತರಿಗೆ ಸೂರು ಒದಗಿಸುವ ಧ್ಯೇಯ ನಮ್ಮ ಸರ್ಕಾರದ್ದಾಗಿದೆ. 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

    ದಾಖಲೆಯ 15ನೇ ಬಜೆಟ್​ ಮಂಡಿಸಿದ ಸಿಎಂ ಸಿದ್ದರಾಮಯ್ಯ, 2019 ರಿಂದ 2023ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರ್ಮಿಸಲಾದ ಮನೆಗಳ ಸಂಖ್ಯೆ ಕೇವಲ 5.19 ಲಕ್ಷ. ಬಾಕಿ ಉಳಿದಿರುವ 12 ಲಕ್ಷ ಮನೆಗಳ ನಿರ್ಮಾಣದ ಹೊಣೆಗಾರಿಕೆ ನಮ್ಮ ಸರ್ಕಾರದ ಮುಂದಿದೆ ಎಂದು ಹೇಳಿದ್ದಾರೆ.

    2023-2024ನೇ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಳಿಸಲಾಗುತ್ತಿದೆ. 2024-25ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ ಹೊಂದಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ವಸತಿರಹಿತರ ಸಂಖ್ಯೆಯನ್ನು ಗುರುತಿಸಲು ಒಂದು ಸಮೀಕ್ಷೆಯನ್ನು ನಡೆಸಲಾಗುವುದು. ನಗರ ಪ್ರದೇಶದ ಬಡ ನಿವಾಸಿಗಳಿಗೆ ಕೈಗೆಟಕುವ ದರದಲ್ಲಿ ವಸತಿ ಸೌಲಭ್ಯ ಒದಗಿಸಲು ಸಂಪನ್ಮೂಲ ಕ್ರೋಢೀಕರಣಕ್ಕಾಗಿ ವಸತಿ ಇಲಾಖೆಯು ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಿದೆ.

    ಇದನ್ನೂ ಓದಿ: ನಟ ದರ್ಶನ್​​​​​ ಹುಟ್ಟುಹಬ್ಬಕ್ಕೆ ಟ್ರ್ಯಾಕ್ಟರ್​ ಗಿಫ್ಟ್​ ಕೊಟ್ಟ ಅಭಿಮಾನಿಗಳು

    ಕೊಳಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆ (AHP) ಅಡಿ 1,18,359 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಹುತೇಕ ಫಲಾನುಭವಿಗಳು ಬಡ ಕುಟುಂಬದವರಾಗಿದ್ದು, ತಮ್ಮ ಪಾಲಿನ ವಂತಿಗೆಯಾದ ಐದು ಲಕ್ಷ ರೂ.ಗಳನ್ನು ಪಾವತಿಸಲು ಸಾಧ್ಯವಾಗದೇ ಯೋಜನೆಯು ಮಂದಗತಿಯಲ್ಲಿ ಸಾಗುತ್ತಿತ್ತು. ಇದನ್ನು ಮನಗಂಡು ನಮ್ಮ ಸರ್ಕಾರವು ಫಲಾನುಭವಿಗಳು ಪಾವತಿಸಬೇಕಾದ ವಂತಿಗೆಯನ್ನು
    ಒಂದು ಲಕ್ಷ ರೂ.ಗಳಿಗೆ ಸೀಮಿತಗೊಳಿಸಿ ಹೆಚ್ಚುವರಿ ನಾಲ್ಕು ಲಕ್ಷ ರೂ.ವರೆಗಿನ ಫಲಾನುಭವಿ ವಂತಿಗೆಯನ್ನು ಭರಿಸಲು ತೀರ್ಮಾನಿಸಿದೆ. ಅದರಂತೆ ಶೀಘ್ರದಲ್ಲಿಯೇ 48,796 ಮನೆಗಳನ್ನು ಪೂರ್ಣಗೊಳಿಸಿ ಕೊಳಗೇರಿ ನಿವಾಸಿಗಳಿಗೆ ಹಸ್ತಾಂತರಿಸಲಾಗುವುದು.

    ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆ ಕಾಯ್ದೆಯಡಿ ಕೊಳೆಗೇರಿ ಸೆಸ್‌ ದರ ಪರಿಷ್ಕರಣೆ ಮಾಡುವುದು. ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಸ್ಥಿರ ಆಸ್ತಿಗಳಿಂದ ಸಂಪನ್ಮೂಲ ಸೃಜಿಸಲಾಗುವುದು. ಕರ್ನಾಟಕ ರಿಯಲ್‌ ಎಸ್ಟೇಟ್‌ ನಿಯಂತ್ರಣ ಪ್ರಾಧಿಕಾರವು ರಿಯಲ್‌ ಎಸ್ಟೇಟ್‌ ವಲಯದಲ್ಲಿ ಪಾರದರ್ಶಕತೆ, ವಿಶ್ವಾಸಾರ್ಹತೆ ಹಾಗೂ ದಕ್ಷತೆಯನ್ನು ಹೆಚ್ಚಿಸಲು ಹಾಗೂ ಮನೆ ಖರೀದಿದಾರರ ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿದೆ. 2023-24 ನೇ ಸಾಲಿನಲ್ಲಿ ಡೆವಲಪರ್‌ಗಳಿಗೆ 40 ಕೋಟಿ ರೂ. ದಂಡ ವಿಧಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ದಕ್ಷ ಹಾಗೂ ಪರಿಣಾಮಕಾರಿ ಕಾರ್ಯನಿರ್ವಹಣೆಯ ಮೂಲಕ ಜನರ ಹಿತರಕ್ಷಣೆಗೆ ಆದ್ಯತೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್​ ಭಾಷಣದಲ್ಲಿ ಘೋಷಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts