

ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯಪಾಲರ ಮೂಲಕ ತಪ್ಪು ಭಾಷಣ ಮಾಡಿಸಿದೆ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ವಿಧಾನಪರಿಷತ್ತಿನಲ್ಲಿ ಮಂಗಳವಾರ ರಾಜ್ಯಪಾಲರ ಭಾಷಣ ಮೇಲೆ ವಂದನಾ ನಿರ್ಣಯ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾಜ್ಯಪಾಲರ ಭಾಷಣದಲ್ಲಿ ಸಾಕಷ್ಟು ಅಂಕಿ ಅಂಶಗಳು ತಪ್ಪಾಗಿವೆ. ಅಸತ್ಯ ವಿವರಗಳಿವೆ. ಮನಸ್ಸು ಇಲ್ಲದಿದ್ದರೂ ಅವರು ಭಾಷಣ ಮಾಡಿದ್ದಾರೆ. ಈ ಬಗ್ಗೆ ಅವರಿಗೂ ನೋವು ಇದೆ. ಇತ್ತ ಕಾಂಗ್ರೆಸ್ ಸರ್ಕಾರ, ರಾಜ್ಯಪಾಲರ ಅಧಿಕಾರವನ್ನು ಮೊಟುಕುಗೊಳಿಸುವ ಮೂಲಕ ಸಂವಿಧಾನಕ್ಕೆ ಅಗೌರವ ತರುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆಡಳಿತ ಪಕ್ಷದ ಸಾಕಷ್ಟು ಶಾಸಕರೇ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದಾರೆ. ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿಗೆ ಮೀಸಲಿಟ್ಟಿದ್ದ ಅನುದಾನವನ್ನು ಬೇರೆ ಉದ್ದೇಶಕ್ಕೆ ಬಳಸಿಕೊಂಡಿದ್ದಾರೆ. ಅವಶ್ಯಕತೆ ಇರುವವರಿಗೆ ಗ್ಯಾರಂಟಿ ಯೋಜನೆ ನೀಡಬೇಕು. ಅಭಿವೃದ್ಧಿ ಕಾಮಗಾರಿಗಳು ವೇಗವಾಗಿ ನಡೆಯುವಂತಾಗಬೇಕು. ಅನುದಾನವನ್ನು ಬೇಕಾಬಿಟ್ಟಿಯಾಗಿ ಖರ್ಚು ಮಾಡಲಾಗುತ್ತಿದೆ. ಗುತ್ತಿಗೆದಾರರಿಂದ ಶೇ.60 ಕಮಿಷನ್ ವಸೂಲಿ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ಸರ್ಕಾರ ಮಾಡಬೇಕು. ಆರೋಗ್ಯ, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸರ್ಕಾರಕ್ಕೆ ಕಿವಿಹಿಂಡಿದರು.
2 ವರ್ಷಗಳಿಂದ ರೈತರ ಆತ್ಮಹತ್ಯೆ ಸಂಖ್ಯೆ ಹೆಚ್ಚಳವಾಗಿದೆ. ಪ್ರಾದೇಶಿಕ ಅಸಮತೋಲನ ಜಾಸ್ತಿಯಾಗಿದೆ. ಮೈಕ್ರೋ ಫೈನಾನ್ಸ್ ಹಾವಳಿಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಇನ್ನೂ ನಿಂತಿಲ್ಲ. ಬೆಟ್ಟಿಂಗ್ ಹಾವಳಿಯೂ ವಿಪರೀತವಾಗಿದ್ದು, ಹಲವು ಮಂದಿ ಕೋಟ್ಯಂತರ ರೂ.ಮೌಲ್ಯದ ಆಸ್ತಿ&ಪಾಸ್ತಿ ಕಳೆದುಕೊಂಡಿದ್ದಾರೆ. ಆನೇಕ ಎಂಎಸ್ಎಂಇ ಸಂಸ್ಥೆಗಳು ಮುಚ್ಚಿವೆ. ಹಲವು ಅಭಿವೃದ್ಧಿ ಕಾಮಗಾರಿಗಳು ಹಳ್ಳ ಹಿಡಿದಿವೆ. "ಗ್ರೇಟರ್ ಬೆಂಗಳೂರು' ಏನು ಪ್ರಯೋಜನವಿಲ್ಲ ಎಂದು ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ವಿವಿಗಳನ್ನು ಮುಚ್ಚಬೇಡಿ:
ಆರ್ಥಿಕ ನೆಪವೊಡ್ಡಿ ವಿವಿಗಳನ್ನು ಮುಚ್ಚಬಾರದು. ಶಿಕ್ಷಣ ಎಂಬುದು ವ್ಯಾಪಾರವಲ್ಲ. ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ವಿವಿಗಳಾಗಿವೆ. ಆರ್ಥಿಕ ಕಾರಣದಿಂದ ವಿವಿಗಳನ್ನು ಮುಚ್ಚಿದರೆ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಈ ಬಗ್ಗೆ ಸರ್ಕಾರ ಮರು ಪರಿಶೀಲಿಸಿ ವಿವಿಗಳನ್ನು ಕಾಪಾಡಬೇಕು ಎಂದು ಛಲವಾದಿ ನಾರಾಯಣಸ್ವಾಮಿ, ಸರ್ಕಾರಕ್ಕೆ ಮನವಿ ಮಾಡಿದರು. ರಾಜ್ಯಪಾಲರ ಭಾಷಣದಲ್ಲಿ ಹಲವು ನ್ಯೂನತೆಗಳಿವೆ. ಇವುಗಳನ್ನು ಸರಿಪಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಸರ್ಕಾರ ತೆಗೆದುಕೊಳ್ಳುವ ಒಳ್ಳೆಯ ಕಾರ್ಯಕ್ರಮಗಳಿಗೆ ನಮ್ಮ ಸಹಕಾರ ಸದಾ ಇರಲಿದೆ ಎಂದರು.