More

    ಸರ್ಕಾರಿ ಆದೇಶ ಪಾಲನೆ ಕಡ್ಡಾಯ

    ಬೆಳಗಾವಿ: ಕರೊನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ವೈದ್ಯರ ಜತೆಗೆ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು ಸಹಕಾರ ನೀಡಬೇಕು. ಸರ್ಕಾರದ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದರು.
    ನಗರದ ಬಿಮ್ಸ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ವೈದ್ಯರು ಮತ್ತು ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕರೊನಾ ವೈರಸ್ ನಿಯಂತ್ರಣದಲ್ಲಿದೆ. ಆದರೂ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.

    ಮಾಸ್ಕ್, ಸ್ಯಾನಿಟೈಸರ್‌ಗಳನ್ನು ಅಕ್ರಮವಾಗಿ ದಾಸ್ತಾನು ಇಟ್ಟುಕೊಳ್ಳುವ ಔಷಧ ಅಂಗಡಿಗಳ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳ ಭೇಟಿಗೆ ಆಗಮಿಸುವವರನ್ನು ಮತ್ತು ಮದುವೆ, ಇತರೆ ಸಭೆ- ಸಮಾರಂಭಗಳು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಜನರು ಸೇರುವುದನ್ನು ಕೂಡ ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಐಸೋಲೇಷನ್ ಬೆಡ್‌ಗಳನ್ನು ಸಿದ್ಧವಾಗಿಡುವ ಸಾಧ್ಯತೆಯನ್ನು ಪರಿಶೀಲಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದರು.

    ಸರ್ಕಾರಿ ಆಸ್ಪತ್ರೆಗೆ ಕಳುಹಿಸಿ: ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಮಾತನಾಡಿ, ಕೋವಿಡ್-19 ಲಕ್ಷಣ ಹೊಂದಿರುವ ವ್ಯಕ್ತಿಗಳು ಚಿಕಿತ್ಸೆಗೆ ಬಂದರೆ ಅಂತಹವರನ್ನು ಜಿಲ್ಲಾ ಆಸ್ಪತ್ರೆಗೆ ರೆಫರ್ ಮಾಡಬೇಕು. ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಹೊರತುಪಡಿಸಿ ಅನಗತ್ಯವಾಗಿ ಆಗಮಿಸುವ ಇತರರನ್ನು ತಡೆಯಬೇಕು ಎಂದರು.

    ಅಗತ್ಯ ತರಬೇತಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ವಿ. ಮುನ್ಯಾಳ ಮಾತನಾಡಿ, ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಇಲಾಖೆಯ ಅಧಿಕಾರಿಗಳಿಗೆ ರಾಜ್ಯಮಟ್ಟದ ಮತ್ತು ಜಿಲ್ಲಾ ಮಟ್ಟದ ತರಬೇತಿ ಕೂಡ ನೀಡಲಾಗಿದೆ.

    ಎಲ್ಲ ಇಲಾಖೆಯ ಸಮನ್ವಯ ಸಭೆ ನಡೆಸಲಾಗಿದ್ದು, ಮಾಹಿತಿ ಸಂಗ್ರಹ, ತುರ್ತು ಚಿಕಿತ್ಸೆ ಸೇರಿ ವಿವಿಧ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೆಎಲ್ಇ ಆಸ್ಪತ್ರೆಯಲ್ಲಿ 63 ಹಾಸಿಗೆಯ ಪ್ರತ್ಯೇಕ ಕಟ್ಟಡ ಸಿದ್ಧಪಡಿಸಲಾಗಿದೆ. ವಿವಿಧ ಕಡೆಯ ಮುರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಕೂಡ ತುರ್ತು ಸಂದರ್ಭದಲ್ಲಿ ಬಳಸಲು ಸಿದ್ಧಪಡಿಸಿಟ್ಟುಕೊಳ್ಳಲಾಗಿದೆ. ಅಂತಾರಾಜ್ಯ ಗಡಿಗಳಲ್ಲಿ ಆರೋಗ್ಯ ತಪಾಸಣೆಗೆ ತಂಡಗಳನ್ನು ನಿಯೋಜಿಸಲಾಗಿದೆ. ಅದೇ ರೀತಿ ಬಸ್ ಹಾಗೂ ರೈಲ್ವೆ ನಿಲ್ದಾಣ, ನ್ಯಾಯಾಲಯದ ಆವರಣದಲ್ಲಿ ಥರ್ಮಲ್ ಸ್ಕ್ಯಾನರ್ ಕೂಡ ಅಳವಡಿಸಲಾಗುತ್ತಿದೆ ಎಂದು ವಿವರಿಸಿದರು.

    ಪೊಲೀಸ್ ಆಯುಕ್ತ ಬಿ.ಎಸ್. ಲೋಕೇಶ್‌ಕುಮಾರ್, ಬಿಮ್ಸ್ ನಿರ್ದೇಶಕ ಡಾ. ದಾಸ್ತಿಕೊಪ್ಪ, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಕೆ.ಎಚ್., ಅಧಿಕಾರಿ ಸಯೀದಾ ಅಫ್ರೀನ್ ಬಾನು ಬಳ್ಳಾರಿ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts