ಶಿವಮೊಗ್ಗ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಹಿಂದುಪರ ಸಂಘಟನೆಯ ಮುಖಂಡರು, ಕಾರ್ಯಕರ್ತರನ್ನು ಗುರಿಯಾಗಿಸಿಕೊಳ್ಳಲಾಗಿದೆ. ಆರ್‌ಎಸ್‌ಎಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮತ್ತಿತರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದ ಪೊಲೀಸರು, ಇದೀಗ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರನ್ನು ಗಡಿಪಾರು ಮಾಡಲು ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದ್ವೇಷ ಭಾಷಣ ಮಾಡಿದ್ದಾರೆ ಎಂಬುದನ್ನೇ ಆಧಾರವಾಗಿಸಿಕೊಂಡು ಹಿಂದು ಸಂಘಟನೆಯ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಿಸುವುದಾದರೆ ಪ್ರತಿದಿನವೂ ಹಿಂದೂಗಳ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುವ ಅನ್ಯ ಕೋಮಿನ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳದಿರುವುದು ಯಾವ ನ್ಯಾಯ? ಎಂದು ಪತ್ರಿಕಾ ಹೇಳಿಕೆಯಲ್ಲಿ ಅರುಣ್ ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಈ ಬಗ್ಗೆ ಸ್ಪಷ್ಟನೆ ನೀಡಬೇಕು. ಮತಾಂಧ ಶಕ್ತಿಗಳ ಅಟ್ಟಹಾಸ ಹೆಚ್ಚಾಗುತ್ತಿರುವ ಸಮಯದಲ್ಲಿ ಹಿಂದು ಮುಖಂಡರು ಮತ್ತು ಕಾರ್ಯಕರ್ತರನ್ನು ಗುರಿಯಾಗಿಸುವ ಮೂಲಕ ಪೊಲೀಸ್ ವ್ಯವಸ್ಥೆ ಕೂಡ ಪಕ್ಷಪಾತದ ನಡೆ ತೋರುತ್ತಿರುವುದು ಆತಂಕಕಾರಿಯಾಗಿದೆ ಎಂದಿದ್ದಾರೆ.
ಸಮಾಜಘಾತುಕ ಶಕ್ತಿಗಳು ಪೊಲೀಸ್ ಠಾಣೆಗಳ ಮೇಲೆ ದಾಳಿ ನಡೆಸಿದರೂ ಅವರನ್ನು ರಕ್ಷಿಸಲಾಗುತ್ತಿದೆ. ಇತ್ತೀಚೆಗೆ ಸರ್ಕಾರದ ಈ ನಡವಳಿಕೆಗೆ ಹೈಕೋರ್ಟ್ ಕೂಡಾ ಚಾಟಿ ಬೀಸಿತ್ತು. ಹಿಂದು ಧ್ವನಿಗಳನ್ನು ಕುಗ್ಗಿಸಿ ಅವರ ಮನೆಯ ಮೇಲೆ ದಾಳಿ ನಡೆಸುವುದು, ಸುಳ್ಳು ಕೇಸುಗಳನ್ನು ದಾಖಲಿಸುವುದು, ಗಡಿಪಾರು ಆದೇಶ ಹೊರಡಿಸುವುದು ಕಾಂಗ್ರೇಸ್ ಸರ್ಕಾರದ ಹಿಂದು ವಿರೋಧಿ ನೀತಿಗೆ ಕೈಗನ್ನಡಿಯಂತಿದೆ ಎಂದು ಹೇಳಿದ್ದಾರೆ.
ಸರ್ಕಾರದ ಈ ನಡೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಹಿಂದು ಸಂಘಟನೆಗಳ ಪರವಾದ ಕಾರ್ಯಕರ್ತರನ್ನು ಗಡಿಪಾರು ಮಾಡುವ ನಿರ್ಧಾರವನ್ನು ಸರ್ಕಾರ ಹಿಂಪಡೆಯಬೇಕು. ಈಗಾಗಲೇ ಹಿಂದು ಮುಖಂಡರ ಮೇಲೆ ದಾಖಲಿಸಿರುವ ಎಫ್‌ಐಆರ್‌ಗಳನ್ನು ರದ್ದುಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.