ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸಿದ ಸರ್ಕಾರ; ಆರೋಗ್ಯ ವಿಮೆ ಸೇರಿದಂತೆ ಮಹತ್ವದ ಘೋಷಣೆ

VidhanaSoudha
Published on

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಮನವಿಯನ್ನು ರಾಜ್ಯ ಸರ್ಕಾರ ಪುರಸ್ಕರಿಸಿದೆ.

ಈ ಕುರಿತು ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಅತಿಥಿ ಉಪನ್ಯಾಸಕರ ವೇತನವನ್ನು 5 ಸಾವಿರ ರೂಪಾಯಿ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ, ಆರೋಗ್ಯ ವಿಮೆ ಸೇರಿದಂತೆ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.

ನಾವು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದ್ದೇವೆ. ಕೆಲವು ಬೇಡಿಕೆಗಳನ್ನು ನಮ್ಮ ಮುಂದೆ ಇಟ್ಟಿದ್ದರು. ಸೇವೆ ಖಾಯಂ ಅವರ ಪ್ರಮುಖ ಬೇಡಿಕೆ ಆಗಿದೆ. ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ ನೀಡಲಾಗುವುದು. ಅತಿಥಿ ಉಪನ್ಯಾಸಕರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

MC Sudhakar

ವರ್ಕ್‌ಲೋಡ್ ಬಗ್ಗೆಯೂ ಸೂಚನೆ ನೀಡಲಾಗಿದೆ. 60 ವರ್ಷ ಪೂರೈಸಿದ ಅತಿಥಿ ಉಪನ್ಯಾಸಕರು ನಿವೃತ್ತಿಯಾಗುವಾಗ 5 ಲಕ್ಷ ನೀಡಲು ತೀರ್ಮಾನ ಮಾಡಲಾಗಿದೆ. ಅತಿಥಿ ಉಪನ್ಯಾಸಕರಿಗೆ ಆರೋಗ್ಯ ವಿಮೆ ನೀಡಲಾಗುವುದು. ಸಹಾಯಕ ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನು ಪರಿಗಣಿಸುತ್ತೇವೆ. ಹೊಸದಾಗಿ ನೇಮಕ ಆಗುವವರಿಗೆ ಕೃಪಾಂಕ ನೀಡುವ ಬಗ್ಗೆ ನಿರ್ಧಾರ ಮಾಡಲಾಗಿದೆ.

ಹೆಚ್ಚು ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಿಸಲು ನಿರ್ಧರಿಸಲಾಗಿದೆ. ಅತಿಥಿ ಉಪನ್ಯಾಸಕರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ನಿರ್ಧರಿಸಲಾಗಿದೆ. ಹೀಗಾಗಿ ಅತಿಥಿ ಉಪನ್ಯಾಸಕರು ಮುಷ್ಕರ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಈಗಾಗಲೇ ಮುಷ್ಕರದಿಂದ ತೊಂದರೆಯಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net