More

    ಗುರು ಭವನ ನಿರ್ಮಾಣಕ್ಕೆ ಅನುದಾನ

    ಶಿರಸಿ: ಶಿಕ್ಷಣ ಯಾರೊಬ್ಬರ ಸ್ವತ್ತಲ್ಲ. ದೇಶದ ಪ್ರತಿಯೊಬ್ಬರಿಗೂ ಶಿಕ್ಷಣ ಪಡೆಯುವ ಹಕ್ಕಿದೆ. ಜಾತಿ, ಧರ್ಮದ ಕಲಹವಿಲ್ಲದೇ ಎಲ್ಲರೂ ವಿದ್ಯಾವಂತರಾಗಬೇಕು ಎನ್ನುವ ಉದ್ದೇಶದಿಂದ ಶಿಕ್ಷಕರು ಶ್ರಮಿಸುತ್ತಿದ್ದಾರೆ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

    ನಗರದ ವಿದ್ಯಾಧಿರಾಜ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಗುರು ಗೌರವಾರ್ಪಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

    ಶಿಕ್ಷಣದಿಂದ ಮಾತ್ರ ದೇಶದ ಪ್ರಗತಿ ಸಾಧ್ಯವಾಗುತ್ತದೆ. ಸಮಾಜ ತಿದ್ದುವ ಕಾರ್ಯದಲ್ಲಿ ಶಿಕ್ಷಕರ ಪಾತ್ರ ದೊಡ್ಡದಿದೆ. ಶಿಕ್ಷಣದ ಕೊರತೆಯಿಂದ ದೇಶದಲ್ಲಿ ಹಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಶಿಕ್ಷಕರ ಸಮಸ್ಯೆಗಳನ್ನು ಈಗಾಗಲೇ ಕೆಲವರು ನನ್ನ ಗಮನಕ್ಕೆ ತಂದಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಗಮನ ಸೆಳೆಯಲಾಗಿದ್ದು, ಶಿಕ್ಷಕರ ನಿಯೋಗ ತೆರಳಿ ಸಮಸ್ಯೆ ತಿಳಿಸಲು ನಿಮ್ಮ ಜತೆ ನಾನು ಇರುತ್ತೇನೆ ಎಂದು ಭರವಸೆ ನೀಡಿದರು.
    ಮಾರಿಕಾಂಬಾ ಪ್ರೌಢಶಾಲೆಯ ಶಿಕ್ಷಕ ನಾರಾಯಣ ಭಾಗವತ ಅವರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ಸಂಗತಿ. ಗುರು ಭವನಕ್ಕೆ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡುತ್ತೇನೆ ಎಂದರು.

    ಶಿರಸಿ ಶೈಕ್ಷಣಿಕ ಜಿಲ್ಲೆಯ ಪ್ರೌಢಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕರು ಎಂದು ಗೌರವಿಸಲಾಯಿತು.

    ಸಹಾಯಕ ಆಯುಕ್ತ ಆರ್.ದೇವರಾಜ, ತಹಸೀಲ್ದಾರ್ ಶ್ರೀಧರ ಮುಂದಲಮನಿ, ತಾಪಂ ಪ್ರಭಾರಿ ಇಒ ಸತೀಶ ಹೆಗಡೆ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ ನಾಯ್ಕ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ನಾಯಕ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕಿರಣ್, ನಾಯ್ಕ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts