ರಾಮದುರ್ಗ: ಹಲವು ವರ್ಷಗಳಿಂದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದರೂ, ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಪಟ್ಟಣದ ಶ್ರೀಮತಿ ಈರಮ್ಮ ಎಸ್.ಯಾದವಾಡ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಧರಣಿ ನಡೆಸಿದರು.
ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ರಾಜು ಕಂಬಾರ ಮಾತನಾಡಿ, ರಾಜ್ಯದಲ್ಲಿ ಸುಮಾರು 430 ಪದವಿ ಕಾಲೇಜುಗಳಲ್ಲಿ 12 ಸಾವಿರಕ್ಕೂ ಅಧಿಕ ಉಪನ್ಯಾಸಕರು ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅದರಲ್ಲಿ ಕೆಲವರು ನಿವೃತ್ತಿ ವಯೋಮಿತಿ ಸಮೀಪಿಸುತಿದ್ದರೂ, ಸಹ ಸೇವಾ ಭಧ್ರತೆ ಹಾಗೂ ಸೇವೆಯನ್ನು ಕಾಯಂಗೊಳಿಸುವಂತೆ ಸಾಕಷ್ಟು ಹೋರಾಟ ಮಾಡಿ, ಸಿಎಂ ಸೇರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ, ಸರ್ಕಾರ ಮಾತ್ರ ಗಮನ ಹರಿಸುತ್ತಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಪಕ್ಷ ನಾಯಕರಾಗಿದ್ದ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಬೇಕು ಎಂದು ಸದನದಲ್ಲಿ ಧ್ವನಿ ಎತ್ತಿದ್ದರು. ಆದರೆ, ಪ್ರಸ್ತುತ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿದ್ದರೂ ಸಹ ಕಾಯಂಗೊಳಿಸಲು ಕ್ರಮ ಕೈಗೊಳ್ಳದೆ ಇರುವುದು ವಿರ್ಪಯಾಸ. ಕೂಡಲೇ ಅಧಿವೇಶನದಲ್ಲಿ ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.
ತಾಲೂಕಾಧ್ಯಕ್ಷ ಯಲ್ಲಪ್ಪ ಕುರಿ, ವಿ.ಎಸ್. ಲಕ್ಕನಗೌಡ್ರ, ಶಂಕರ ಚುಳಕಿ, ಎಂ.ಎ. ನಕಾರ್ಚಿ, ರಮೇಶ ಹತ್ತಿ, ಎನ್.ಬಿ. ಕೊಪ್ಪದ, ಪರಶುರಾಮ ಮುಖಾರಿ ಇತರರು ಇದ್ದರು.