

ಅಮೆರಿಕಾ : ವಿಶ್ವದ ದೊಡ್ಡಣ್ಣ ಎಂದು ಹೇಳಿಕೊಳ್ಳುವ ಅಮೆರಿಕದಲ್ಲಿ ದೇಶದ ಉಪಾಧ್ಯಕ್ಷೆ ಹಾಗೂ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ ಅವರ ಚುನಾವಣಾ ಪ್ರಚಾರ ಕಚೇರಿಯ ಮೇಲೆ ಗುಂಡಿನ (Gunshots Fired )ದಾಳಿ ನಡೆಸಲಾಗಿದೆ.
ಇತ್ತೀಚೆಗಷ್ಟೇ ಅಮೆರಿಕದ ಮಾಜಿ ಅಧ್ಯಕ್ಷ ಹಾಗೂ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮೇಲೆ ನಡೆದ ಎರಡು ಹತ್ಯೆ ಯತ್ನಗಳು ಸಂಚಲನ ಮೂಡಿಸಿದ್ದವು. ಆ ಘಟನೆಗಳು ಮರೆಯುವ ಮುನ್ನವೇ ಕಮಲಾ ಹ್ಯಾರಿಸ್ ಕಚೇರಿ ಮೇಲೆ ಗುಂಡಿನ ದಾಳಿ ನಡೆದಿರುವುದು ಅಮೆರಿಕದ ಜನರಲ್ಲಿ ಆತಂಕ ಮೂಡಿಸಿದೆ. ದೇಶದಲ್ಲಿ ಕಾನೂನು ಸುವ್ಯವಸ್ಥೆ ಏನಾಯಿತು ಎಂದು ಅಲ್ಲಿನ ಜನರು ಪ್ರಶ್ನಿಸುತ್ತಿದ್ದಾರೆ. ಇದನ್ನು US ಭದ್ರತಾ ಏಜೆನ್ಸಿಗಳ ಪ್ರಮುಖ ವೈಫಲ್ಯ ಎಂದು ಹೇಳಾಗಿದೆ.
ಮಂಗಳವಾರ ಮಧ್ಯರಾತ್ರಿಯ ನಂತರ ಅರಿಜೋನಾ ರಾಜ್ಯದಲ್ಲಿ ಕಮಲಾ ಹ್ಯಾರಿಸ್ ಅವರ ಚುನಾವಣಾ ಪ್ರಚಾರ ಸಮನ್ವಯ ಕಚೇರಿಯ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಇದರಿಂದ ಕಚೇರಿಯ ಕಿಟಕಿ ಗಾಜುಗಳು ಒಡೆದಿವೆ. ಈ ವೇಳೆ ಕಚೇರಿಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಡೆಮಾಕ್ರಟಿಕ್ ಪಕ್ಷದ ಕಾರ್ಯಕರ್ತರನ್ನು ಭಯಭೀತಗೊಳಿಸುವ ಉದ್ದೇಶದಿಂದ ಮಧ್ಯರಾತ್ರಿಯ ನಂತರ ಯಾರೂ ಇಲ್ಲದ ವೇಳೆ ದಾಳಿ ನಡೆಸಲಾಗಿದೆ ಎಂದು ಶಂಕಿಸಲಾಗಿದೆ. ಡೆಮಾಕ್ರಟಿಕ್ ಪಕ್ಷದ ಮುಖಂಡರು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ.