More

    ಪರಿವಾರ, ತಳವಾರ ಶೀಘ್ರ ಎಸ್‌ಟಿಗೆ

    ಎಚ್.ಡಿ.ಕೋಟೆ: ಪರಿವಾರ, ತಳವಾರ ಸಮುದಾಯವನ್ನು ಎಸ್‌ಟಿ ವರ್ಗಕ್ಕೆ ಸೇರ್ಪಡೆ ಮಾಡುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದ್ದು, ಫೆ.5 ಅಥವಾ 6ರೊಳಗೆ ರಾಷ್ಟ್ರಪತಿಗಳ ಅಂಕಿತ ಬೀಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.
    ಪಟ್ಟಣದಲ್ಲಿ 8.5 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಿರುವ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಪುರಸಭೆ ಕಚೇರಿ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಗುರುವಾರ ಅವರು ಮಾತನಾಡಿದರು.

    ತಾಲೂಕಿನ ವಾಲ್ಮೀಕಿ ಭವನ ಹಾಗೂ ಡಿ.ದೇವರಾಜ ಅರಸು ಸಮುದಾಯ ಭವನ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದು, ಶೀಘ್ರವೇ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಮಾ.30ರ ಬಳಿಕ ಎಚ್.ಡಿ.ಕೋಟೆ, ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲೂಕಿನ ಅಭಿವೃದ್ಧಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಚರ್ಚಿಸಿ ಎಲ್ಲ ಕ್ರಮ ಕೈಗೊಳ್ಳಲಾಗುತ್ತದೆ. ಈ ಮೂಲಕ ಅಪೂರ್ಣ ಕಾಮಗಾರಿಗಳನ್ನು ಆದ್ಯತೆ ಮೇಲೆ ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

    ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ತಾಲೂಕಿಗೆ ಬಿಡುಗಡೆಯಾಗಬೇಕಿದ್ದ 60 ಕೋಟಿ ರೂ. ಅನುದಾನವನ್ನು ತಡೆ ಹಿಡಿಯಲಾಗಿದ್ದು, ಕೂಡಲೇ ಇದನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕಬಿನಿ ಬೃಂದಾವನ ಯೋಜನೆಗೆ ಕ್ರಿಯಾ ಯೋಜನೆ ರೂಪಿಸಿ ಕೆಆರ್‌ಎಸ್ ಮಾದರಿಯಲ್ಲಿ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ತಾಲೂಕಿನ ರಸ್ತೆಗಳ ಅಭಿವೃದ್ಧಿ, ಆದಿವಾಸಿಗಳಿಗೆ ಮೂಲಸೌಕರ್ಯ ಒದಗಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.

    ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಮಾತನಾಡಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳಾ ಶ್ಯಾಂ, ಉಪಾಧ್ಯಕ್ಷೆ ಗೌರಮ್ಮ ಚಂದ್ರಶೇಖರ್, ಸದಸ್ಯರಾದ ಎಸ್.ಕೃಷ್ಣ, ವೆಂಕಟಸ್ವಾಮಿ, ತಾಪಂ ಅಧ್ಯಕ್ಷೆ ಮಂಜುಳಾ ದೇವಣ್ಣ, ಉಪಾಧ್ಯಕ್ಷೆ ಮಂಜುಳಾ ಚಂದ್ರೇಗೌಡ, ಸರಗೂರು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಯೋಗೇಶ್, ಉಪಾಧ್ಯಕ್ಷೆ ಮಂಜುಳಾ ರವಿಕುಮಾರ್, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್. ಎಸ್‌ಪಿ ರಿಷ್ಯಂತ್, ಜಿಪಂ ಉಪ ಕಾರ್ಯದರ್ಶಿ ಪ್ರೇಮ್ ಕುಮಾರ್, ತಹಸೀಲ್ದಾರ್ ಮಂಜುನಾಥ್, ಪುರಸಭೆ ಮುಖ್ಯಾಧಿಕಾರಿ ವಿಜಯ್‌ಕುಮಾರ್, ತಾಪಂ, ಪುರಸಭೆ ಹಾಗೂ ಸರಗೂರು ಪಪಂ ಸದಸ್ಯರು, ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts