More

    ಎಚ್.ವಿ.ರಾಜೀವ್ ಕಾಂಗ್ರೆಸ್ ಸೇರ್ಪಡೆಗೆ ಸಿದ್ಥತೆ

    ಮೈಸೂರು: ಬಿಜೆಪಿ ಮುಖಂಡ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಅವರು ಮಾ.27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.


    ವಿದ್ಯಾರಣ್ಯಪುರಂನ ಬೂತಾಳ ಮೈದಾನದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಎಚ್.ವಿ.ರಾಜೀವ್ ಅವರು ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗಲಿದೆ.


    ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಎಚ್.ವಿ.ರಾಜೀವ್ ಅವರು ಮುಡಾ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸಿದ್ದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಕೆ.ಆರ್. ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದ ಕಾರಣ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದ ಎಚ್.ವಿ.ರಾಜೀವ್ ತಮ್ಮ ಮುಖಂಡರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.


    ಸೋಮವಾರ ಬೂತಾಳ ಮೈದಾನದಲ್ಲಿ ಸಮಾವೇಶದ ಸಿದ್ಧತೆ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ವಿಚಾರವನ್ನು ಒಪ್ಪಿ ಮತ್ತು ಅತ್ಯುತ್ತಮವಾಗಿ ಕೆಲಸ ಮಾಡುತ್ತಿರುವ ಜನಪ್ರಿಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ಕಾಂಗ್ರೆಸ್ ಸೇರುತ್ತಿರುವುದಾಗಿ ತಿಳಿಸಿದ್ದಾರೆ.


    ಕಾಂಗ್ರೆಸ್ ಸೇರ್ಪಡೆಯೂ ಏಕಾಏಕಿ ನಿರ್ಧಾರವಲ್ಲ. ಹಲವು ದಿನಗಳಿಂದ ಈ ವಿಚಾರ ಚರ್ಚೆಯಲ್ಲಿತ್ತು. ಸಮಯ ಈಗ ಕೂಡಿ ಬಂದಿದೆ. ಬಿಜೆಪಿಯಲ್ಲಿ ಉತ್ತಮವಾಗಿ ನಡೆಸಿಕೊಂಡರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸುವ ಉದ್ದೇಶದಿಂದಲೇ ಈ ತೀರ್ಮಾನ ತೆಗೆದುಕೊಂಡಿದ್ದೇನೆ ಎಂದು ಹೇಳಿದರು.


    ನನ್ನೊಂದಿಗೆ ಮಾಜಿ ಮೇಯರ್ ಬಿ.ಎಲ್.ಭೈರಪ್ಪ, ಪಾಲಿಕೆ ಮಾಜಿ ಸದಸ್ಯ ಕೆ.ವಿ.ಮಲ್ಲೇಶ್, ಜಿಪಂ ಮಾಜಿ ಸದಸ್ಯ ಸದಾನಂದ, ಓಂಪ್ರಕಾಶ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. 8ರಿಂದ 10 ಸಾವಿರ ಜನರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.


    ಕೆ.ಆರ್.ಕ್ಷೇತ್ರದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾತನಾಡಿ, ಬಿಜೆಪಿ ಮುಖಂಡರಾದ ಎಚ್.ವಿ.ರಾಜೀವ್ ಅವರ ಕಾಂಗ್ರೆಸ್ ಸೇರ್ಪಡೆ ಪಕ್ಷದ ಬಲವರ್ಧನೆಗೆ ಸಹಕಾರಿಯಾಗುತ್ತದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಬಲ ಬರಲಿದೆ. ಪಕ್ಷದ ಸಿದ್ಧಾಂತ ಒಪ್ಪಿ ಪಕ್ಷ ಸೇರ್ಪಡೆಯಾಗುತ್ತಿರುವ ರಾಜೀವ್ ಅವರನ್ನು ಸ್ವಾಗತಿಸುತ್ತೇನೆ ಎಂದರು.


    ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಮುಖಂಡರಾದ ಈಶ್ವರ್ ಚಕ್ಕಡಿ, ಸೋಮಶೇಖರ್, ಡೈರಿ ವೆಂಕಟೇಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts