

ಹಗರಿಬೊಮ್ಮನಹಳ್ಳಿ: ತಾಲೂಕಿನ ಶೈಕ್ಷಣಿಕ ಅಭಿವೃದ್ಧಿಗಾಗಿ ಬಜೆಟ್ನಲ್ಲಿ ಹಣ ಮೀಸಲಿಡುವಂತೆ ಸರ್ಕಾರವನ್ನು ಒತ್ತಾಯಿಸಬೇಕೆಂದು ಶಾಸಕ ಕೆ.ನೇಮಿರಾಜ್ ನಾಯ್ಕಗೆ ಎಸ್ಎಫ್ಐ ತಾಲೂಕು ಸಮಿತಿ ಪಟ್ಟಣದಲ್ಲಿ ಮನವಿ ಸಲ್ಲಿಸಿತು.
ಸಂಘಟನೆಯ ವಿಜಯನಗರ ಜಿಲ್ಲಾಧ್ಯಕ್ಷ ಜಯಸೂರ್ಯ ಮಾತನಾಡಿ, ತಾಲೂಕಿನ ಶೈಕ್ಷಣಿಕ ಅಭಿವೃದ್ಧಿಗಾಗಿ ಮೀಸಲಿರಿಸಿದ ಹಣವನ್ನು ಸಮರ್ಪಕವಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಈಗಾಗಲೇ ಸಾಕಷ್ಟು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ, ಈ ಕುರಿತ ವಿಷಯವನ್ನು ಕಡೆಗಣಿಸಲಾಗುತ್ತಿದೆ ಎಂದು ದೂರಿದರು. ತಾಲೂಕಿನಲ್ಲಿ ಖಾಲಿ ಇರುವ ಶಿಕ್ಷಕ, ಉಪನ್ಯಾಸಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಬೇಕು. ಡೊನೇಷನ್ ಹಾವಳಿ ಮತ್ತು ಅತಿ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆ, ಕಾಲೇಜುಗಳನ್ನು ನಿಯಂತ್ರಿಸಲು ಕ್ರಮ ವಹಿಸುವಂತೆ ಜಯಸೂರ್ಯ ಒತ್ತಾಯಿಸಿದರು.
ರಾಜ್ಯ ಉಪಾಧ್ಯಕ್ಷ ಡಾ.ದೊಡ್ಡಬಸವರಾಜ ಮಾತನಾಡಿ, ತಾಲೂಕಿನಲ್ಲಿ ಹೆಚ್ಚುವರಿ ಕಾಲೇಜು, ಸರ್ಕಾರಿ ಸ್ನಾತಕೋತ್ತರ, ಇಂಜಿನಿಯರಿಂಗ್, ವೈದ್ಯಕೀಯ ಮತ್ತು ನರ್ಸಿಂಗ್, ಬಿ.ಇಡಿ, ಡಿಪ್ಲೊಮಾ ಕಾಲೇಜ್ ಗಳನ್ನು ಆರಂಭಿಸಬೇಕು. ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕು. ಪ್ರತಿ ಹಳ್ಳಿಗೂ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಶಾಸಕ ಕೆ.ನೇಮಿರಾಜ್ನಾಯ್ಕ ಮಾತನಾಡಿ, ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು. ಪ್ರಮುಖರಾದ ಪುಷ್ಪಾವತಿ, ಅನುಷಾ, ಸಂಜನಾ, ಶ್ರುತಿ, ಗಂಗಮ್ಮ, ಸುಮಾ, ಶಾಂತಿ ಇತರರಿದ್ದರು.