ಸುಳ್ಯ: ಬಸ್‌ನಲ್ಲಿ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪಿ ಯುವಕ ನಿಯಾಝ್‌ನನ್ನು ಸುಳ್ಯ ಪೊಲೀಸರು ಬಂಧಿಸಿ ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ಬರುತ್ತಿರುವ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ನಿಯಾಝ್ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗಳನ್ನೊಳಗೊಂಡ ಹಿಂದು ಸಂಘಟನೆಗಳ ಯುವಕರು ಥಳಿಸಿದ್ದರು.
ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಿಯಾಝ್ ಬಳಿಕ ಮುಳ್ಳೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ. ಈ ನಡುವೆ ಸುಳ್ಯ ಪೊಲೀಸರು ಈರ್ವರು ಯುವಕರನ್ನು ಥಳಿಸಿದ ಆರೋಪದ ಮೇಲೆ ಬಂಧಿಸಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿ ಮಂಗಳವಾರ ಸುಳ್ಯ ಠಾಣೆಯ ಮುಂಭಾಗ ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆರೋಪಿಯನ್ನು ಬಂಧಿಸುವಂತೆ ಹಾಗೂ ಅಮಾಯಕ ಯುವಕರನ್ನು ಬಂಧಿಸಿದ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯದಿಂದ ಅಮಾನತುಗೊಳಿಸುವಂತೆ ಆಗ್ರಹಿಸಿದ್ದರು.
ಆರೋಪಿ ಯುವಕನಿಂದ ಲೈಂಗಿಕ ಕಿರುಕುಳ ಎದುರಿಸಿದ್ದ ಕಾಲೇಜು ವಿದ್ಯಾರ್ಥಿನಿ ನಿಯಾಝ್ ಮೇಲೆ ಲೈಂಗಿಕ ಕಿರುಕುಳ ಹಾಗೂ ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿದ ಹಿನ್ನೆಲೆಯಲ್ಲಿ ಇದೀಗ ನಿಯಾಝ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.