ಸಿನಿಮಾ

ಎರಡೂ ಕ್ಷೇತ್ರಗಳನ್ನು ಗೆಲ್ಲಿಸಲು ಹರಿಪ್ರಸಾದ್ ಕರೆ

ಮಡಿಕೇರಿ: ಕೊಡಗು ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಲು ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶ್ರಮ ವಹಿಸಬೇಕೆಂದು ವಿಧಾನ ಪರಿಷತ್‌ನ ವಿರೋಧ ಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕರೆ ನೀಡಿದರು.


ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಅಧ್ಯಕ್ಷ ಎಚ್.ಎ.ಹಂಸರವರ ಅಧ್ಯಕ್ಷತೆಯಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಿದ್ದ ಬೂತ್ ಮತ್ತು ವಲಯ ಮಟ್ಟದ ಚುನಾವಣಾ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದರು.


ಬೂತ್ ಅಧ್ಯಕ್ಷರು, ವಲಯ ಅಧ್ಯಕ್ಷರು, ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿನ ರುವಾರಿಗಳಾಗಿದ್ದಾರೆ. ಮೇ ೧೦ ರವರೆಗೆ ನಿರಂತರ ಜನ ಸಂಪರ್ಕದಲ್ಲಿರುವಂತೆ ಕಿವಿಮಾತು ಹೇಳಿದ ಅವರು, ವಿದ್ಯಾವಂತ ಹಾಗೂ ಪ್ರಜ್ಞಾವಂತ ಅಭ್ಯರ್ಥಿಗಳು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಇವರುಗಳ ಗೆಲುವು ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.


ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸುಜು ತಿಮ್ಮಯ್ಯ ಮಾತನಾಡಿ, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಬೂತ್ ಮಟ್ಟದಿಂದಲೇ ಒಗ್ಗಟ್ಟಿನಿಂದ ಕಾರ್ಯಪ್ರವೃತ್ತರಾಗಬೇಕೆಂದು ತಿಳಿಸಿದರು.


ಬ್ಲಾಕ್ ಪ್ರಚಾರ ಸಮಿತಿ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಕಲೀಲ್ ಬಾಷ, ವಕ್ತಾರ ಮೇರಿಯಂಡ ಸಂಕೇತ್ ಪೂವಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ರೋಶನ್ ಕೊಂಬಾರನ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಶ್ ದೋಳ್‌ಪಾಡಿ, ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ, ಕೊಡಗು ಕಾಂಗ್ರೆಸ್ ಹಾಗೂ ಮಡಿಕೇರಿ ಬ್ಲಾಕ್ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Latest Posts

ಲೈಫ್‌ಸ್ಟೈಲ್