ಹಾವೇರಿ: ಕಾರ್ಮಿಕರಿಗೆ ಕನಿಷ್ಠ 31,566 ರೂ. ಮಾಸಿಕ ವೇತನ ನಿಗಧಿಪಡಿಸುವುದು ಸೇರಿ 54 ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾರ್ಚ್ 3ರಿಂದ ಅನಿರ್ದಿಷ್ಟಾವಧಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ರಾಜ್ಯ ಘಟಕದ ಕಾರ್ಯದರ್ಶಿ ಮಹೇಶ ಪತ್ತಾರ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಎಲ್ಲ ಪ್ರಕಾರದ ಕಾರ್ಮಿಕರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ. ಆದರೆ, ಸರ್ಕಾರ ಅವರ ಬೇಡಿಕೆ ಈಡೇರಿಕೆಗೆ ಸ್ಪಂದಿಸುತ್ತಿಲ್ಲ. ಹೀಗಾಗಿ, ಈ ಬಾರಿ ನಿರಂತರವಾಗಿ ಧರಣಿ ನಡೆಸಲಾಗುವುದು ಎಂದರು.
ಗ್ರಾಮ ಪಂಚಾಯಿತಿ ನೌಕರರು, ಬಿಸಿಯೂಟ ನೌಕರರು, ಕಟ್ಟಡ ನಿರ್ಮಾಣ ಕಾರ್ಮಿಕರು, ಹಮಾಲಿ ಕಾರ್ಮಿಕರು, ಅಸಂಘಟಿತ ವಲಯದ ಕಾರ್ಮಿಕರು, ವಿವಿಧ ಕಾರ್ಖಾನೆ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರುಸಹಾಯಕಿಯರು ಧರಣಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕೇಂದ್ರ ಸರ್ಕಾರ 29 ಕಾನೂನುಗಳನ್ನು 4 ಸಂಹಿತೆಯನ್ನಾಗಿ ಮಾಡಿದ್ದು, ಈ ನಿಯಮಾವಳಿಗಳನ್ನು ರಾಜ್ಯ ಸರ್ಕಾರ ಜಾರಿ ಮಾಡಬಾರದು. ಅಸಂಘಟಿತ ಕಾರ್ಮಿರ ಅಭಿವೃದ್ಧಿಗಾಗಿ ಬಜೆಟ್‌ನಲ್ಲಿ -್ಝಠಿ; 500 ಕೋಟಿ ಮೀಸಲಿರಿಸಬೇಕು. ಗಿಗ್ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಸಿಐಟಿಯು ಪ್ರತಿನಿಧಿಗಳನ್ನು ಸೇರಿಸಬೇಕು. ಕರ್ನಾಟಕ ಕಾರ್ಮಿಕ ಅಧ್ಯಯನ ಸಂಸ್ಥೆ ಬಲಪಡಿಸಿ, ಕರ್ನಾಟಕ ಕಾರ್ಮಿಕ ಸಮ್ಮೇಳನ ರಚಿಸಬೇಕು. ಬಿಸಿಯೂಟ ಯೋಜನೆಯ ಖಾಸಗೀಕರಣ ಕೈಬಿಡಬೇಕು ಎಂದು ಅವರು ಒತ್ತಾಯಿಸಿದರು.
ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಬೇಕು. ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ನಿಗದಿಪಡಿಸಿರುವ ಎಲ್ಲ ಸೌಲಭ್ಯಗಳನ್ನು ನೀಡಬೇಕು. ಕಲ್ಯಾಣ ಮಂಡಳಿಯಲ್ಲಿ ಕಿಟ್ ಖರೀದಿಯಲ್ಲಿ ಅಕ್ರಮವಾಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕು. ಗ್ರಾ.ಪಂ. ನೌಕರರಿಗೆ ವೇತನ ಪಾವತಿಸಲು 380 ಕೋಟಿ ರೂ. ಕೊರತೆಯಾಗಿದ್ದು, ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡಬೇಕು. ಬೀಡಿ ಕಾರ್ಮಿಕರಿಗೆ ಪರ್ಯಾಯ ಉದ್ಯೋಗ ಯೋಜನೆಗಳನ್ನು ಸ್ಥಾಪಿಸಬೇಕು. ಹೊಸ ಪಿಂಚಣಿ ವ್ಯವಸ್ಥೆ ರದ್ದುಪಡಿಸಿ, ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
ಸಿಐಟಿಯು ಜಿಲ್ಲಾ ಸಂಚಾಲಕ ಬಸವರಾಜ ಪೂಜಾರ, ಎಸ್‌ಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ, ರಾಜೇಶ್ವರಿ ಹಿರೇಮಠ, ಸಿದ್ದಮ್ಮ ಚೌಟಿ ಇದ್ದರು.