More

    ಜೋಳ ಉತ್ಪನ್ನ ಖರೀದಿ ಕೇಂದ್ರಗಳನ್ನು ಆರಂಭಿಸಿ; ಡಿಸಿ ರಘುನಂದನ ಮೂರ್ತಿ ಸೂಚನೆ

    ಹಾವೇರಿ: ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ಜೋಳ ಉತ್ಪನ್ನ ಖರೀದಿ ಕೇಂದ್ರಗಳನ್ನು ಜಿಲ್ಲೆಯ ಆಯ್ದ ತಾಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚನೆ ನೀಡಿದ್ದಾರೆ.
    ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ನಿಗಧಿಪಡಿಸಿದ ಬೆಂಬಲಬೆಲೆ ಹಾಗೂ ಮಾರ್ಗಸೂಚಿ ಅನ್ವಯ ಎಫ್.ಎ.ಕ್ಯೂ. ಗುಣಮಟ್ಟದ ಜೋಳ ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
    ಬಿಳಿಜೋಳ (ಮಾಲ್ದಂಡಿ) ಪ್ರತಿ ಕ್ವಿಂಟಲ್‌ಗೆ 3,225 ರೂ. ಹಾಗೂ ಜೋಳ (ಹೈಬ್ರಿಡ್) ಪ್ರತಿ ಕ್ವಿಂಟಾಲ್‌ಗೆ 3,180 ರೂ.ನಂತೆ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ. ಏಪ್ರಿಲ್ 11ರಿಂದ ರೈತರ ನೋಂದಣಿ ಆರಂಭಿಸಿ, ಏಪ್ರಿಲ್ 1ರಿಂದ ಮೇ 31ರವರೆಗೆ ರಾಜ್ಯ ಸಹಕಾರಿ ಮಾರಾಟ ಮಂಡಳಿ ನಿಯಮಿತ ಸಂಸ್ಥೆಯ ಮೂಲಕ ಜೋಳ ಖರೀದಿಗೆ ಕ್ರಮ ವಹಿಸಬೇಕು. ಪ್ರತಿ ರೈತರಿಂದ ಜೋಳದ ಉತ್ಪಾದನೆಗೆ ಅನುಗುಣವಾಗಿ ಪ್ರತಿ ಎಕರೆಗೆ 20 ಕ್ವಿಂಟಲ್‌ನಂತೆ ಖರೀದಿಗೆ ಅವಕಾಶವಿದೆ. ಜೋಳ ಖರೀದಿ ಮೊತ್ತವನ್ನು ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಯಾದ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡಬೇಕು ಎಂದು ಸಲಹೆ ನೀಡಿದರು.
    ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಮಾತನಾಡಿ, ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಜೋಳವನ್ನು 33,772 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದೆ ಎಂದು ಮಾಹಿತಿ ನೀಡಿದರು.
    ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಮೇಶ ಎಂ.ಎಸ್., ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಪ್ರದೀಪ ಎಲ್., ಸಹಕಾರಿ ಸಂಘಗಳ ಉಪನಿಬಂಧಕ ಎ.ಯು.ಖಾನ್., ರಾಜ್ಯ ಉಗ್ರಾಣ ನಿಗಮ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.
    ಖರೀದಿ ಕೇಂದ್ರ:
    ಜೋಳ ಖರೀದಿ ಕೇಂದ್ರಗಳನ್ನು ಹಾವೇರಿ, ಶಿಗ್ಗಾಂವಿ ಹಾಗೂ ರಾಣೆಬೆನ್ನೂರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲ್ಲಿ ತೆರೆಯಲು ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts