ಸಿನಿಮಾ

ಗುಡುಗು- ಸಿಡಿಲಿನಿಂದಾಗುವ ಅಪಾಯ ತಗ್ಗಿಸಿ; ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚನೆ

ಹಾವೇರಿ: ಮುಂಗಾರು ಪೂರ್ವ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುವ ಗುಡುಗು, ಸಿಡಿಲಿನ ಪ್ರತಿಕೂಲ ಪರಿಣಾಮದಿಂದ ರಕ್ಷಣೆ ಪಡೆಯಲು ಸಾರ್ವಜನಿಕರು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಪಾಲಿಸಬೇಕು. ಈ ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ಪ್ರಸರಣ ಹಾಗೂ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮ ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹೊರಡಿಸಿರುವ ಸಲಹೆ ಸೂಚನೆಗಳ ಕುರಿತಂತೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಕಂದಾಯ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗಾಗಿ ಅಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ವೇಳೆ ಗುಡುಗು ಮತ್ತು ಸಿಡಿಲು ಬಡಿತ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಕಾಲಕಾಲಕ್ಕೆ ಹವಾಮಾನ ಇಲಾಖೆ ನೀಡುವ ಮುನ್ಸೂಚನೆ ಪಾಲಿಸುವ ಮೂಲಕ ಪ್ರತಿಕೂಲ ಪರಿಣಾಮ ತಗ್ಗಿಸಲು, ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಪ್ಪಿಸಲು ಅಗತ್ಯವಿರುವ ಉಪಶಮನ ಮತ್ತು ಸನ್ನದ್ಧತೆ ಕ್ರಮಗಳನ್ನು ಕೈಗೊಳ್ಳಬೇಕು. ಸಿಡಿಲಿಗೆ ಸಾಮಾನ್ಯವಾಗಿ ತುತ್ತಾಗುವಂತಹ ಸ್ಥಳಗಳನ್ನು ಗುರುತಿಸಿ, ಸಾರ್ವಜನಿಕ ಆಸ್ತಿ ಹಾಗೂ ಮೂಲ ಸೌಕರ್ಯ ರಕ್ಷಣೆಗೆ ಕ್ರಮವಹಿಸಲು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಭಾರತೀಯ ಹವಾಮಾನ ಇಲಾಖೆ ಕಾಲಕಾಲಕ್ಕೆ ನೀಡುವ ಗುಡುಗು-ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರೆ ಸಮೂಹ ಮಾಧ್ಯಮಗಳನ್ನು ಬಳಸಿಕೊಂಡು ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ನೀಡಬೇಕು. ಈ ಮೂಲಕ ಸಂಭವನೀಯ ಅಪಾಯ ತಗ್ಗಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಗ್ರಾಮ ಪಂಚಾಯತಿಗಳು ಸಮುದಾಯ ಕೇಂದ್ರಗಳ ಮೂಲಕ ಹಾಗೂ ಶಾಲೆ, ಕಾಲೇಜುಗಳಲ್ಲಿ ವ್ಯಾಪಕ ತಿಳುವಳಿಕೆ ಹಾಗೂ ಮಾಹಿತಿ ನೀಡುವ ಕೆಲಸವನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಾರ್ವಜನಿಕರಿಗೆ ಮುನ್ನೆಚ್ಚರಿಕೆ
ಗುಡುಗು-ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳಬೇಕು. ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ, ಕಿವಿಗಳನ್ನು ಮುಚ್ಚಿಕೊಳ್ಳಬೇಕು. ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು. ಇವು ಮಿಂಚನ್ನು ಆಕರ್ಷಿಸುತ್ತವೆ.
ಸಿಡಿಲು ಸಂದರ್ಭದಲ್ಲಿ ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹೊಡೆಯುವ ಸಾಧ್ಯತೆ ಇರುವುದರಿಂದ ಸ್ನಾನ ಅಥವಾ ಶವರ್ ಮಾಡಬಾರದು. ಪಾತ್ರೆಗಳನ್ನು ತೊಳೆಯಬಾರದು, ಬಟ್ಟೆ ಒಗೆಯಬಾರದು, ವಿದ್ಯುತ್ ಸಂಪರ್ಕ ಹೊಂದಿರುವ ದೂರವಾಣಿ ಬಳಸಬಾರದು. ಗುಡುಗು-ಸಿಡಿಲಿನ ಮುನ್ಸೂಚನೆ ಅಥವಾ ಮುನ್ನೆಚ್ಚರಿಕೆ ಇದ್ದಲ್ಲಿ ಪ್ರಯಾಣವನ್ನು ಮುಂದೂಡಬೇಕು. ಮೋಟರ್ ಸೈಕಲ್ ಅಥವಾ ಇನ್ನಿತರೆ ಯಾವುದೇ ತೆರೆದ ವಾಹನಗಳಲ್ಲಿ ಸಂಚಾರವನ್ನು ಮಾಡಬಾರದು ಎಂದು ಡಿಸಿ ಸಾರ್ವಜನಿಕರಿಗೆ ತಿಳಿಸಿದ್ದಾರೆ.

Latest Posts

ಲೈಫ್‌ಸ್ಟೈಲ್