More

    ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಏ.12ರಿಂದ ಶುರು; ಕೊಠಡಿಯೊಳಗೆ ಐವರಿಗೆ ಮಾತ್ರ ಅವಕಾಶ; ಜಿಲ್ಲಾಧಿಕಾರಿ ರಘುನಂದನ ಮೂರ್ತಿ

    ಹಾವೇರಿ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಏ.12ರಂದು ಅಧಿಸೂಚನೆ ಹೊರಡಿಸಲಾಗುವುದು. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಸಲ್ಲಿಸುವಾಗ ಕೊಠಡಿಯೊಳಗೆ ಐವರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ತಿಳಿಸಿದರು.
    ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.12ರಿಂದ ಸಾರ್ವತ್ರಿಕ ರಜಾದಿನ ಹೊರತುಪಡಿಸಿ ಏ.19ರವರೆಗೆ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಹಾವೇರಿ ಜಿಲ್ಲಾಧಿಕಾರಿಯವರ ಕಚೇರಿ ಕೋರ್ಟ್ ಹಾಲ್‌ನಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದು. ಚುನಾವಣಾಧಿಕಾರಿಗಳ ಕೊಠಡಿಯಲ್ಲಿರುವ ಗಡಿಯಾರದಲ್ಲಿ ತೋರಿಸುವ ಸಮಯವನ್ನೇ ಅಂತಿಮ ಎಂದು ಪರಿಗಣಿಸಲಾಗುತ್ತದೆ. ಮಧ್ಯಾಹ್ನ 3 ಗಂಟೆ ನಂತರ ಯಾವುದೇ ಕಾರಣಕ್ಕೂ ನಾಮಪತ್ರಗಳನ್ನು ಸ್ವೀಕರಿಸಲಾಗುವುದಿಲ್ಲ. ಸಾರ್ವತ್ರಿಕ ರಜಾ ದಿನವಾದ ಏ.13 ಹಾಗೂ 14ರಂದು ನಾಮಪತ್ರ ಸ್ವೀಕರಿಸುವುದಿಲ್ಲ ಎಂದು ವಿವರಿಸಿದರು.
    ಚುನಾವಣಾಧಿಕಾರಿಯವರ ಕಾರ್ಯಾಲಯದ 100 ಮೀಟರ್ ಪರಿಧಿಯೊಳಗೆ ಕೇವಲ ಮೂರು ವಾಹನಗಳಿಗೆ ಮಾತ್ರ ಪ್ರವೇಶಾವಕಾಶವಿರುತ್ತದೆ. ನಾಮಪತ್ರಗಳ ಸ್ವೀಕೃತಿ ಕೊಠಡಿಯೊಳಗೆ ಅಭ್ಯರ್ಥಿ, ಒಬ್ಬ ಸೂಚಕ ಹಾಗೂ ಇತರೆ ಮೂರು ಜನರಿಗೆ ಮಾತ್ರ ಅವಕಾಶವಿದೆ. ಅಭ್ಯರ್ಥಿ ಪರ ಸೂಚಕ ನಾಮಪತ್ರ ಸಲ್ಲಿಸಲು ಇಚ್ಛಿಸಿದರೆ ಅವರೊಂದೊಂದಿಗೆ ಇತರೆ ನಾಲ್ಕು ಜನರು ನಾಮಪತ್ರ ಸಲ್ಲಿಕೆ ವೇಳೆ ಕೊಠಡಿಯೊಳಗೆ ಪ್ರವೇಶಾವಕಾಶವಿದೆ ಎಂದು ತಿಳಿಸಿದರು.
    ನಾಮಪತ್ರ ಸಲ್ಲಿಸುವಾಗ ನಡೆಸುವ ರ‌್ಯಾಲಿ ಮತ್ತು ಪ್ರಚಾರ ಸಭೆಗಳಿಗೆ ಅನುಮತಿ ಕಡ್ಡಾಯವಾಗಿದೆ. ಈ ಸಭೆ-ಸಮಾರಂಭಗಳ ವೆಚ್ಚವನ್ನು ಅಭ್ಯರ್ಥಿಗಳ ಚುನವಣಾ ವೆಚ್ಚಕ್ಕೆ ಸೇರಿಸಲಾಗುವುದು ಎಂದು ತಿಳಿಸಿದರು.
    ಮತದಾನ ಪ್ರಕ್ರಿಯೆಗೆ ಈಗಾಗಲೇ ಜಿಲ್ಲಾಡಳಿತ ಎಲ್ಲ ಸಿದ್ಧತೆಗಳನ್ನು ಕೈಗೊಂಡು ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಮೊದಲ ಸುತ್ತಿನ ತರಬೇತಿಯನ್ನು ನೀಡಲಾಗಿದೆ. ಚುನಾವಣಾ ಸಾಮಾನ್ಯ ವೀಕ್ಷಕರು ಕ್ಷೇತ್ರಕ್ಕೆ ಬಂದಾಗ ಮತಗಟ್ಟೆ ಅಧಿಕಾರಿಗಳ ಗಣಕೀಕೃತ ರ‌್ಯಾಂಡಮೈಜೇಷನ್ ಮಾಡಿ ಏ.30ರೊಳಗೆ ಎರಡನೇ ಸುತ್ತಿನ ತರಬೇತಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
    ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಲೋಕಸಭಾ ಚುನಾವಣೆಯ ಜಿಲ್ಲಾ ಮಾದರಿ ನೀತಿಸಂಹಿತೆ ನಿಗಾ ಸಮಿತಿ ಅಧ್ಯಕ್ಷ ಅಕ್ಷಯ ಶ್ರೀಧರ ಹಾಗೂ ಅಪರ ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಪೂಜಾರ ವೀರಮಲ್ಲಪ್ಪ ಉಪಸ್ಥಿತರಿದ್ದರು.
    1,600 ಜನ ಮನೆಯಿಂದ ಮತದಾನಕ್ಕೆ ಒಪ್ಪಿಗೆ :
    ಹಾವೇರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಾವೇರಿ ಹಾಗೂ ಗದಗ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,600 ಜನರು ಮನೆಯಿಂದಲೇ ಮತದಾನ ಮಾಡಲು ಒಪ್ಪಿದ್ದಾರೆ. 85 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನರಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸುವ ಬದಲು ಮನೆಯಲ್ಲೇ ಮತದಾನ ಮಾಡಲು ಇಚ್ಚಿಸುವವರು 12ಡಿ ನಮೂನೆ ವಿತರಿಸಲಾಗಿತ್ತು. ಮತದಾನದ ದಿನ ಗೈರು ಹಾಜರಾತಿ ಮತದಾರರೆಂದು ಗುರುತಿಸಲಾದ ಅಗ್ನಿಶಾಮಕ ಠಾಣೆ, ವೈದ್ಯಕೀಯ ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳಿಗೆ 12ಡಿ ವಿತರಿಸಲಾಗಿತ್ತು. ಈ ಪೈಕಿ 550 ಜನರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಡಿಸಿ ತಿಳಿಸಿದರು.
    11.43 ಲಕ್ಷ ನಗದು ವಶಕ್ಕೆ
    ಜಿಲ್ಲೆಯಲ್ಲಿ ಈವರೆಗೆ ಯಾವುದೇ ಮಾದರಿ ನೀತಿಸಂಹಿತೆ ಉಲ್ಲಂಘನೆಯ ಪ್ರಕರಣಗಳು ದಾಖಲಾಗಿಲ್ಲ. ದಾಖಲೆಗಳಿಲ್ಲದೆ ಸಾಗಾಣಿಕೆ ಮಾಡುತ್ತಿದ್ದ ಹಣವನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟಾರೆ 11.43 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ. 81,79,529 ರೂ. ಮೊತ್ತದ 35.149 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. 48,384 ರೂ. ಮೊತ್ತದ 1.94 ಕೆ.ಜಿ. ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. 5.50 ಲಕ್ಷ ರೂ. ಮೊತ್ತದ 975 ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಮದ್ಯ ಸಾಗಾಣಿಕೆಗೆ ಬಳಸಿದ 1,28,81,000 ರೂ. ಮೌಲ್ಯದ 31 ವಾಹನಗಳನ್ನು ಸೀಜ್ ಮಾಡಲಾಗಿದೆ. 552 ಅಬಕಾರಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಒಟ್ಟಾರೆ 2,28,01,949 ರೂ. ಮೊತ್ತದ ವಸ್ತು, ಮದ್ಯ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿ ರಘುನಂದನ ಮೂರ್ತಿ ಮಾಹಿತಿ ನೀಡಿದರು.
    ಮೇ 7ರಂದು ಮತದಾನ
    ಏ.12ರಿಂದ 19ರವರೆಗೆ ನಾಮಪತ್ರ ಸ್ವೀಕರಿಸಲಾಗುವುದು. ಏ.20ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏ.22ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 7ರಂದು ಬೆಳಗ್ಗೆ 7ರಿಂದ 6 ಗಂಟೆವರೆಗೆ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ನಡೆಯಲಿದೆ ಎಂದು ಡಿಸಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts