ಹಾವೇರಿ: ಜಿಲ್ಲೆಯ ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್ ಹಾಗೂ ಹೋಂ ಸ್ಟೇಗಳಿಗೆ ಭೇಟಿ ನೀಡುವ ವಿದೇಶಿ ಪ್ರವಾಸಿಗರನ್ನು ಒಳಗೊಂಡಂತೆ ಎಲ್ಲ ಪ್ರವಾಸಿಗರ ಭದ್ರತೆ ಹಾಗೂ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳಬೇಕು ಎಂದು ರೆಸಾರ್ಟ್ಸ್ ಹಾಗೂ ಹೋಂ ಸ್ಟೇಗಳ ಮಾಲೀಕರಿಗೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿರುವ ಅನಧಿಕೃತ ರೆಸಾರ್ಟ್ ಹಾಗೂ ಹೋಂ ಸ್ಟೇಗಳು ನೋಂದಣಿ ಮತ್ತು ಪರವಾನಗೆ(ಲೈಸನ್ಸ್) ಪಡೆಯದೇ ಕಾರ್ಯನಿರ್ವಹಿಸುತ್ತಿದ್ದಲ್ಲಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವ ಮುಂಚಿತವಾಗಿ ಸಂಬಂಧಿಸಿದ ಅಧಿಕಾರ ವ್ಯಾಪ್ತಿಯುಳ್ಳ ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡಿ, ಅನುಮತಿ ಪಡೆಯಬೇಕು. ವಿನಾಕಾರಣ ದುರ್ಘಟನೆ ಸಂಭವಿಸಿದರೆ ಮಾಲೀಕರೇ ಜವಾಬ್ದಾರರಾಗುತ್ತಾರೆ, ಶಿಕ್ಷಾರ್ಹ ಅಪರಾಧಕ್ಕೆ ಒಳಪಡುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಯಾವುದಾದರೂ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಲು ಹಾಗೂ ಸ್ಥಳ ವೀಕ್ಷಣಾ/ಕಾರ್ಯಕ್ರಮಗಳ ಪಟ್ಟಿಯನ್ನು ಪ್ರವಾಸೋದ್ಯಮ ಇಲಾಖೆ ಕಚೇರಿಗೆ ಸಲ್ಲಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ‘ಎ’ ಬ್ಲಾಕ್ ಎರಡನೇ ಮಹಡಿ, ಜಿಲ್ಲಾಡಳಿತ ಭವನ ದೇವಗಿರಿ, ಹಾವೇರಿ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.