More

    ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಇಬ್ಭಾಗ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

    ಹಾವೇರಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಗೆಲ್ಲಲಿದೆ. ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ ಮೂರು ತಿಂಗಳಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಇಬ್ಭಾಗ ಆಗಲಿದೆ. ಅದು ಕರ್ನಾಟಕದ ಮೇಲೂ ಪರಿಣಾಮ ಬೀರಲಿದೆ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
    ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ ಸುಮಾರು ಹನ್ನೆರೆಡು ಸಚಿವರಿಗೆ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚಿಸಿತ್ತು. ಆದರೆ, ಅವರಿಗೆ ಗೆಲ್ಲುವ ವಿಶ್ವಾಸ ಇರಲಿಲ್ಲ. ಹಾಗಾಗಿ, ನೀವೇ ಅಭ್ಯರ್ಥಿಯನ್ನು ಕೊಡಿ ಎಂದಾಗ ಅನಿವಾರ್ಯವಾಗಿ ಅವರು ಅವರ ಮಕ್ಕಳು, ಅಣ್ಣ ತಮ್ಮಂದಿರಿಗೆ ಟಿಕೇಟ್ ಕೊಡಿಸಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ ರಾಜಕೀಯ ಲಾಭ ಆಗುವುದಿಲ್ಲ. ಪ್ರಧಾನಿ ನರೇಂದ್ರ ಮೋದಿಗೆ ಮತ ಹಾಕಲು ಜನ ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು.
    ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆ ದಾಖಲಾಗಿದ್ದು ಚುನಾವಣೆ ಗಿಮಿಕ್ ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಶ್ರೀರಂಗಪಟ್ಟಣದ ಶಾಸಕರೇನು ಡಾಕ್ಟರ್ ಅಲ್ಲ. ಆರೋಗ್ಯದ ವಿಚಾರಗಳನ್ನು ರಾಜಕಾರಣಕ್ಕೆ ಎಳೆದು ತರುವುದು ಸಮಂಜಸ ಅಲ್ಲ. ಅವರು ಚೆನ್ನೈಗೆ ಹೋಗಿದ್ದು, ಚಿಕಿತ್ಸೆ ಪಡೆದಿದ್ದಕ್ಕೆ ಸಾಕ್ಷಿಗಳಿವೆ. ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡುತ್ತಾರೆ. ಸುಮಲತಾ ನಿನ್ನೆ ಅಧ್ಯಕ್ಷರನ್ನು ಭೇಟಿಯಾಗಿದ್ದಾರೆ. ಎಲ್ಲ ಸರಿ ಹೋಗುತ್ತದೆ ಎಂಬ ವಿಶ್ವಾಸವಿದೆ ಎಂದರು.
    ನಾನೂ ಸ್ಟಾರ್ ಪ್ರಚಾರಕನಾಗಿದ್ದೇನೆ. ಸಿನಿಮಾ ಸ್ಟಾರ್ ಪ್ರಚಾರಕರ ಬಗ್ಗೆ ಪಕ್ಷ ತೀರ್ಮಾನಿಸಲಿದೆ. ಕೆಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತೇನೆ. ಎರಡನೇ ಹಂತದಲ್ಲೂ ಪ್ರಚಾರ ಮಾಡುತ್ತೇನೆ ಎಂದರು.
    ಎರಡು ಬಾರಿ ನಾಮಪತ್ರ ಸಲ್ಲಿಸುವೆ :
    ಲೋಕಸಭೆ ಚುನಾವಣಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ದಿನಾಂಕದ ಬಗ್ಗೆ ಭಾನುವಾರ ತೀರ್ಮಾನ ಮಾಡುತ್ತೇವೆ. ಒಳ್ಳೆಯ ಸಮಯ ನೋಡಿ ನಾಮಪತ್ರ ಸಲ್ಲಿಕೆ ಮಾಡುತ್ತೇವೆ. ಎರಡು ಸಲ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ಒಂದು ಸಲ ವೈಯಕ್ತಿಕವಾಗಿ ಹಾಗೂ ಮತ್ತೊಮ್ಮೆ ಸಾರ್ವಜನಿಕವಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts